ಬೆಂಗಳೂರು,ಮೇ. 15(DaijiworldNews/AK): ಕನ್ನಡದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಬೆಂಗಳೂರಿನ ಖಾಸಗಿ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ಗೆ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೆ ಪಹಲ್ಗಾಮ್ ದಾಳಿ ನಡೆದಿದ್ದು ಎಂದಿದ್ದರು. ಈ ಹೇಳಿಕೆ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ರದ್ದು ಕೋರಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಗಾಯಕನ ವಿರುದ್ಧ ತನಿಖಾಧಿಕಾರಿಗಳು ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ.
ಅರ್ಜಿ ವಿಚಾರಣೆ ವೇಳೆ, ಸೋನು ನಿಗಂಗೆ ವಿಚಾರಣೆಗೆ ಹಾಜರಾಗಲು ಹೈಕೋರ್ಟ್ ಸೂಚಿಸಿತು. ಬೆಂಗಳೂರಿಗೆ ಸೋನು ನಿಗಮ್ ಹಾಜರಾದರೆ ಸಮಸ್ಯೆ ಆಗಬಹುದು, ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಸೋನು ನಿಗಂ ಪರ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾ.ಶಿವಶಂಕರ್ ಅಮರಣ್ಣವರ್ ಅವರು, ಸೋನು ನಿಗಂ ಅವರಿರುವ ಜಾಗದಲ್ಲಿಯೇ ವಿಚಾರಣೆ ಮಾಡುವಂತೆ ಅಥವಾ ವಿಡಿಯೋ ಕಾಲ್ ಮೂಲಕ ವಿಚಾರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಮಾತ್ರವಲ್ಲದೆ ಸೋನು ನಿಗಂ ಅವರ ವಿರುದ್ಧ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಹಾಗೂ ನ್ಯಾಯಾಲಯದ ಅನುಮತಿ ಇಲ್ಲದೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಬಾರದು ಎಂದು ಸಹ ಪ್ರಕರಣದ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದರು.