ಬೆಂಗಳೂರು, ನ.17 (DaijiworldNews/TA): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ ಬಳಿಕ ಅವರ ಆಪ್ತ ವಲಯದಲ್ಲೂ ಹಲವು ಬೆಳವಣಿಗೆಗಳು ನಡೆದಿವೆ. ಈ ನಡುವೆ ನಟ ಧನ್ವೀರ್ ಗೌಡ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಧನ್ವೀರ್ ವಿರುದ್ಧ ದಾಖಲಾಗಿದ್ದ ಮೂರು ಎಫ್ಐಆರ್ಗಳ ಪೈಕಿ ಎರಡು ಪ್ರಕರಣಗಳ ತನಿಖೆಗೆ ತಡೆ ನೀಡಿರುವ ನ್ಯಾಯಾಲಯ, ಮತ್ತೊಂದು ಪ್ರಕರಣಕ್ಕೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಮುಂದುವರಿಸಿದೆ.

ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಅವರು ತಮ್ಮನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ರಾಜಾಜಿನಗರ, ಬಸವೇಶ್ವರನಗರ ಹಾಗೂ ಚಾಮರಾಜಪೇಟೆ ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿದ್ದವು. ಪ್ರಕರಣಗಳ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರೂ, ಧನ್ವೀರ್ ತಮ್ಮ ವಿರುದ್ಧದ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಮೂರ್ತಿ ಅನಂತ್ ರಮಾನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಧನ್ವೀರ್ ಪರ ಹಿರಿಯ ವಕೀಲ ಫಣೀಂದ್ರ ವಾದ ಮಂಡಿಸಿ, ದೂರಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಮಾಡಲಾಗಿದೆಯೇ ಹೊರತು, ನಿರ್ದಿಷ್ಟವಾಗಿ ಯಾವ ಮಹಿಳೆಯನ್ನು ನಿಂದಿಸಲಾಗಿದೆ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಲ್ಲದೆ, ಅವಾಚ್ಯ ಶಬ್ದಗಳ ಬಳಕೆಯಿಂದ ಸಾರ್ವಜನಿಕ ಶಾಂತಿಗೆ ಯಾವುದೇ ಧಕ್ಕೆಯಾಗಿಲ್ಲ ಎಂದು ವಾದಿಸಿದ ಅವರು, ಪ್ರಕರಣಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿವಾದಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ತನಿಖೆಗೆ ತಡೆ ನೀಡದಂತೆ ನ್ಯಾಯಾಲಯವನ್ನು ಕೋರಿದರು.
ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಅನಂತ್ ರಮಾನಾಥ್ ಹೆಗ್ಡೆ ಅವರು ರಾಜಾಜಿನಗರ ಮತ್ತು ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್ಐಆರ್ಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದರು. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಮುಂದುವರಿಸುವಂತೆಯೂ ಆದೇಶಿಸಿದರು.
ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸೂಚಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಿದೆ. ಹೈಕೋರ್ಟ್ನ ಈ ಮಧ್ಯಂತರ ಆದೇಶದಿಂದ ನಟ ಧನ್ವೀರ್ ಗೌಡ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಪ್ರಕರಣದ ಅಂತಿಮ ತೀರ್ಪು ಇನ್ನಷ್ಟೇ ಹೊರಬೀಳಬೇಕಿದೆ.