ಇಸ್ಲಮಾಬಾದ್, ಆ.21(DaijiworldNews/AA): ಪಾಕಿಸ್ತಾನದಿಂದ ಇರಾಕ್ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಇರಾನ್ನ ಯಾಜ್ದ್ ಪ್ರಾಂತ್ಯದಲ್ಲಿ ಮಂಗಳವಾರ ಪಲ್ಟಿಯಾಗಿದ್ದು, ಪರಿಣಾಮ 35 ಪ್ರಯಾಣಿಕರು ಮೃತಪಟ್ಟಿದ್ದಾರೆ.
ಬಸ್ಸಿನಲ್ಲಿ 52 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಕಾನಾ ನಗರದವರು. ಅಪಘಾತದಲ್ಲಿ ಕನಿಷ್ಠ 18 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಸ್ನ ಬ್ರೇಕ್ ಸರಿಯಾಗಿ ಹಾಕದಿರುವುದು ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಅಪಘಾತದ ನಂತರ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಗೊಂಡವರ ಪೈಕಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.