ವಾಷಿಂಗ್ಟನ್, ಮೇ 26 (DaijiworldNews/KH): ಯುನೈಟೆಡ್ ಸ್ಟೇಟ್ಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರು ಮುಂದಿನ ವಾರದಿಂದ ಭಾರತ ಸೇರಿದಂತೆ ನಾಲ್ಕು ರಾಷ್ಟ್ರಗಳ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಎಂದು ಅಮೇರಿಕಾ ರಕ್ಷಣ ಸಚಿವಾಲಯ ಮಾಹಿತಿ ನೀಡಿದೆ.
ನಾಲ್ಕು ರಾಷ್ಟ್ರಗಳ ಪ್ರವಾಸದ ಮೊದಲ ಭೇಟಿ ಟೋಕಿಯೊ ಆಗಿದ್ದು, ಅಲ್ಲಿ ಅವರು ಜಪಾನಿನ ರಕ್ಷಣಾ ಸಚಿವ ಯಸುಕಾಸು ಹಮದಾ ಮತ್ತು ಇತರ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಅಲ್ಲಿರುವ ಅಮೇರಿಕಾ ಸೇನೆಯನ್ನೂ ಭೇಟಿ ಮಾಡಲಿದ್ದಾರೆ.
ನಂತರ ಸಿಂಗಾಪುರ ದೇಶಕ್ಕೆ ಪ್ರಯಾಣ ಬೆಳೆಸಲಿರುವ ಅವರು, ಸಿಂಗಾಪುರದಲ್ಲಿ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಟ್ರಾಟೆಜಿಕ್ ಸ್ಟಡೀಸ್ (IISS) 20 ನೇ ಶಾಂಗ್ರಿ-ಲಾದಲ್ಲಿ ಭಾಷಣ ಮಾಡಲಿದ್ದಾರೆ. ಬಳಿಕ ಅಲ್ಲಿನ ಪ್ರಮುಖ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಉಭಯ ರಾಷ್ಟ್ರಗಳ ರಕ್ಷಣಾ ಸಹಭಾಗಿತ್ವದ ಬಗ್ಗೆ ಚರ್ಚೆ ನಡೆಯಲಿದೆ.
ಯುನೈಟೆಡ್ ಸ್ಟೇಟ್ಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರು ಭಾರತಕ್ಕೆ ಭೇಟಿ ನೀಡಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇನ್ನಿತರ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಉಭಯ ರಾಷ್ಟ್ರಗಳ ರಕ್ಷಣಾ ಸಹಭಾಗಿತ್ವವನ್ನು ಆಧುನೀಕರಣಗೊಳಿಸುವ ಬಗ್ಗೆ ಮಾತುಕತೆ ನಡೆಸಲಿದ್ದು, ಇನ್ನೂ ಡಿ-ಡೇನ 79 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಅವರು ಫ್ರೆಂಚ್ ಮತ್ತು ಯುನೈಟೆಡ್ ಕಿಂಗ್ಡಮ್ ರಕ್ಷಣಾ ನಾಯಕರನ್ನು ಭೇಟಿ ಮಾಡಿದ ಬಳಿಕ ಅವರು ಫ್ರಾನ್ಸ್ಗೆ ತೆರಳಲಿದ್ದಾರೆ.