ಇಸ್ಲಾಮಾಬಾದ್, ಫೆ 21(DaijiworldNews/AA): ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಸಮ್ಮಿಶ್ರ ಸರ್ಕಾರ ರಚಿಸುವ ಬಗ್ಗೆ ಒಪ್ಪಂದಕ್ಕೆ ಬಂದಿದ್ದು, ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಜ್ ಷರೀಫ್ ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ವರದಿಯಾಗಿದೆ.
ಪಿಎಂಎಲ್-ಎನ್ ಮತ್ತು ಪಿಪಿಪಿ ಪಕ್ಷ ಸಮ್ಮಿಶ್ರ ಸರ್ಕಾರ ರಚಿಸುವ ಬಗ್ಗೆ ಕೆಲ ದಿನಗಳಿಂದ ಸುದ್ದಿ ಹರಿದಾಡುತ್ತಿತ್ತು. ಇದೀಗ ಹಲವು ದಿನಗಳಿಂದ ನಡೆದ ಮಾತುಕತೆ ನಂತರ ಸಮ್ಮಿಶ್ರ ಸರ್ಕಾರ ರಚಿಸುವ ಬಗ್ಗೆ ಒಪ್ಪಂದಕ್ಕೆ ಬರಲಾಗಿದೆ. ಇನ್ನು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಕಟವಾಗಿ 11 ದಿನಗಳು ಕಳೆದಿದ್ದು, ಈ ಚುನಾವಣೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ದೊರೆತಿರಲಿಲ್ಲ.
ಇನ್ನು ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ-ಜರ್ದಾರಿ ಅವರು ಶೆಹಬಾಜ್ ಷರೀಫ್ ಮತ್ತೆ ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಘೋಷಿಸಿದ್ದಾರೆ. ಜೊತೆಗೆ ಪಿಪಿಪಿ ಸಹ ಅಧ್ಯಕ್ಷ ಆಸಿಫ್ ಜರ್ದಾರಿ ದೇಶದ ಮುಂದಿನ ಅಧ್ಯಕ್ಷರಾಗಲಿದ್ದಾರೆ.