ಇಸ್ಲಾಮಾಬಾದ್, ಮೇ23(Daijiworld News/SS): ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಭಾರಿ ಗೆಲುವಿನತ್ತ ಮುನ್ನಡೆದಿದೆ. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗುವುದು ಬಹುತೇಕ ನಿಚ್ಚಳವೆನಿಸಿದೆ.
ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಗೆ ಸ್ಪಷ್ಟ ಬಹುಮತ ಬಂದ ಹಿನ್ನೆಲೆಯಲ್ಲಿ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶುಭ ಹಾರೈಸಿದ್ದಾರೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್, ಭಾರತದಲ್ಲಿ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳ ಚುನಾವಣಾ ಗೆಲುವಿಗಾಗಿ ಪ್ರಧಾನಿ ಮೋದಿಯನ್ನು ನಾನು ಅಭಿನಂದಿಸುತ್ತೇನೆ. ದಕ್ಷಿಣ ಏಷ್ಯಾದಲ್ಲಿ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ, ಬಿಜೆಪಿ ಹಾಗೂ ನರೇಂದ್ರ ಮೋದಿಯವರಿಗೆ ಚುನಾವಣೆಯ ಫಲಿತಾಶಕ್ಕಾಗಿ ಶುಭ ಹಾರೈಸಿದ್ದಾರೆ.