ಉಡುಪಿ, ನ.30(DaijiworldNews/AA): ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು. ಶೀಘ್ರವೇ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಉಡುಪಿ ಜಿಲ್ಲಾ ಪಂಚಾಯತ್ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂಡ ಶೇಕಡ 17 ರಷ್ಟು ಹೆಚ್ಚು ಮಳೆಯಾಗಿದೆ. ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಸರ್ಕಾರಿ ಕಟ್ಟಡಗಳು, ಸೇತುವೆ ಸೇರಿದಂತೆ ಮತ್ತಿತ್ತರ ಆಸ್ತಿ ಪಾಸ್ತಿಗಳಿಗೆ ಹಾನಿವುಂಟಾಗಿದೆ. ಈ ಸಂಬಂಧ ಈಗಾಗಲೇ ಬೆಳೆಹಾನಿ, ಮಾನವನಹಾನಿಗೆ ಸೇರಿದಂತೆ ಮತ್ತಿತ್ತರ ಹಾನಿಗಳಿಗೆ ಪರಿಹಾರವನ್ನು ನೀಡಲಾಗಿದೆ. ಮೂಲಭೂತ ಸೌಕರ್ಯಗಳ ಹಾನಿಗಳ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಕೃತಿ ವಿಕೋಪ ಅನುದಾನದ ಅಡಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದಕ್ಕೆ ಅನುದಾನದ ಕೊರತೆ ಇದೆ. ಈ ಬಗ್ಗೆ ಮುಂದಿನ ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಜಿಲ್ಲೆಯ ಶಾಸಕರೊಂದಿಗೆ ನಿಯೋಗ ಕೊಂಡೊಯ್ಯಲಾಗುವುದು. ಈ ಸಂಬಂಧ ಅನುದಾನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಪಶ್ಚಿಮ ವಾಹಿನಿ ಯೋಜನೆಯಡಿ ಕರಾವಳಿ ಭಾಗದಲ್ಲಿ ಪಶ್ಚಿಮಾಭಿಮುಖವಾಗಿ ನದಿಗಳ ಸಿಹಿ ನೀರು ಹರಿದು ಸಮುದ್ರ ಸೇರುತ್ತಿದ್ದು, ನೀರು ವ್ಯರ್ಥ ಆಗುತ್ತಿದೆ. ಇದನ್ನು ತಡೆಯಲು ಕಿಂಡಿ ಅಣೆಕಟ್ಟುಗಳನ್ನು ಕಳೆದ ನಾಲ್ಕೈದು ವರ್ಷಗಳಿಂದ ನಿರ್ಮಾಣ ಮಾಡಲು ಮುಂದಾಗಿದ್ದು, ಈವರೆಗೂ ಜಿಲ್ಲೆಯಲ್ಲಿ 666 ಕಿಂಡಿ ಅಣೆಕಟ್ಟುಗಳನ್ನು ನಿರ್ಮಾಣ ಮಾಡಲಾಗಿದೆ. ಸಾಮಾನ್ಯವಾಗಿ ನವೆಂಬರ್ ತಿಂಗಳಲ್ಲಿ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸುವ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಈಗಾಗಲೇ ಶೇ. 50ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಲಾಗಿದೆ. ಬಾಕಿ ಉಳಿದಿರುವುದಕ್ಕೆ ಡಿಸೆಂಬರ್ 20 ರೊಳಗೆ ಅಳವಡಿಸಲು ಸೂಚನೆ ನೀಡಲಾಯಿತು. ಹಾಳಾಗಿರುವ ಹಲಗೆಗಳನ್ನು ಬದಲಿಸಲು ದುರಸ್ತಿಗಾಗಿ ಅನುದಾನ ಸಹ ಬಿಡುಗಡೆ ಮಾಡಲಾಗಿದೆ. ಇವುಗಳನ್ನು ಸೂಕ್ತವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಅಂತರ್ಜಲ ವೃದ್ಧಿಯಾಗಿದೆ ಎಂಬುದರ ವೈಜ್ಞಾನಿಕ ವರದಿಯನ್ನು ನೀಡಲು ಸೂಚನೆ ನೀಡಿದ ಸಚಿವರು, ನಗರಾಭಿವೃದ್ಧಿ ಅನುದಾನದಲ್ಲಿ 15 ದಿನಗಳಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು. ಮೀನುಗಾರಿಕೆಗೆ ಅನುಕೂಲವಾಗುವ ಉದ್ದೇಶದಿಂದ ಹೆಜಮಾಡಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿ ಶೇ. 80 ರಷ್ಟು ಮುಕ್ತಾಯಗೊಂಡಿದ್ದು, ಬಾಕಿ ಉಳಿದಿರುವ ಕಾಮಗಾರಿ ಮುಕ್ತಾಯಗೊಳಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಹಂಗಾರಕಟ್ಟೆಯಲ್ಲಿ ಕೋಸ್ಟಲ್ ಬರ್ತ್ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಲಾಗಿದ್ದು, ಈ ಕುರಿತು ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ ಅನುಮೋದನೆ ನೀಡಲಾಗಿದೆ. ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲು ಆದೇಶಿಸಿದರು. ಜೊತೆಗೆ ಗಂಗೊಳ್ಳಿಯ ಕೋಸ್ಟಲ್ ಬರ್ತ್ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಿಆರ್ ಝೆಡ್ ನಿರಾಕ್ಷೇಪಣೆ ಪಡೆದು ಕಾಮಗಾರಿ ಕೈಗೊಳ್ಳಬೇಕು ಎಂದರು.
ಕಾಡುಗಳ ತಪ್ಪಲಲ್ಲಿ ವಾಸಿಸುವ ಮಲೆಕುಡಿಯ ಕೊರಗ ಸಮುದಾಯದವರಿಗೆ ಸರ್ಕಾರದ ಯೋಜನೆಗಳು ಹಾಗೂ ಕಾಮಗಾರಿಯನ್ನು ತಲುಪಿಸಬೇಕು. ಆದರೆ, ಕೆಲವರು ರೇಷನ್ ಕಾರ್ಡ್ ಹೊಂದಿಲ್ಲವೆಂಬ ಕಾರಣದಿಂದ ಪಡಿತರ ಹಾಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಲ್ಲ. ಅರ್ಹರಿರುವ ಪ್ರತಿಯೊಬ್ಬರಿಗೂ ಇವುಗಳನ್ನು ತಲುಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಡಕ್ ಸೂಚನೆ ನೀಡಿದರು.
ಗ್ರಾಮೀಣ ಭಾಗಗಳಲ್ಲಿ ಕಳೆದ ಹಲವು ದಿನಗಳಿಂದ ತಾಂತ್ರಿಕ ಕಾರಣಗಳಿಂದ ಸರಿಯಾಗಿ ಘನತಾಜ್ಯ ವಿಲೇವಾರಿ ಆಗುತ್ತಿಲ್ಲ. ಇದನ್ನೂ ಕೂಡಲೇ ಬಗೆಹರಿಸಿ, ಜಿಲ್ಲೆಯನ್ನು ತ್ಯಾಜ್ಯ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸಬೇಕು. ಜಿಲ್ಲೆಯಲ್ಲಿ ಜನ ಸಾಮಾನ್ಯರು ಮನೆಕಟ್ಟಲು ಅನುಮತಿ ಪಡೆಯಲು ತುಂಬಾ ತೊಂದರೆ ಅನುಭವಿಸುತ್ತಿದ್ದು, ವಿಶೇಷವಾಗಿ ಜಿಲ್ಲೆಯಲ್ಲಿ 9 ಅಂಡ್ 11 ಸಮಸ್ಯೆ ಇದ್ದು, ಆರ್ಡಿಪಿಆರ್, ಕಂದಾಯ, ನಗರಾಭಿವೃದ್ಧಿ ಇಲಾಖೆಗಳು ಸಮಸ್ಯೆಗಳನ್ನು ಬಗೆಹರಿಸುವಂತೆ ಹೇಳಿದರು.
ಜಿಲ್ಲೆಯ ಜನ ಸಾಮಾನ್ಯರಿಗೆ ಮನೆಕಟ್ಟಲು ಸರಳವಾಗಿ ಮರಳು ಲಭ್ಯವಾಗುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದ ಸಚಿವರು, ಮನೆಕಟ್ಟಲು ಅಗತ್ಯವಿರುವ ಕೆಂಪು ಕಲ್ಲುಗಳ ಗಣಿಗಾರಿಕೆಗೆ ಅಧಿಕಾರಿಗಳು ಜಿಲ್ಲೆಯಲ್ಲಿ ತಡೆಹಿಡಿದಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ. ಅಧಿಕಾರಿಗಳು ನಿಯಮನುಸಾರ ಕೆಂಪು ಕಲ್ಲುಗಳ ಅನುಮತಿ ನೀಡಬೇಕು ಎಂದರು.
ಸಭೆಯಲ್ಲಿ ಶಾಸಕರಾದ ಸುನೀಲ್ ಕುಮಾರ್.ವಿ, ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕೆಡಿಪಿ ಸದಸ್ಯರು ಭಾಗಿಯಾಗಿದ್ದರು.