ಉಡುಪಿ, ಏ.08 (DaijiworldNews/AA): ಇಂಜಿನಿಯರಿಂಗ್ ಸಹಿತ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಸಂಬಂಧ ಏ.16, 17 ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ್ಯ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.



ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಸಿಇಟಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 8,089 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಉಡುಪಿಯಲ್ಲಿ 12, ಕಾರ್ಕಳ 5 ಹಾಗೂ ಕುಂದಾಪುರದಲ್ಲಿ ತಲಾ 6 ಪರೀಕ್ಷಾ ಕೇಂದ್ರ ಸಿದ್ಧಗೊಳಿಸಲಾಗುವುದು. ಪರೀಕ್ಷೆಯನ್ನು ಸುಸೂತ್ರ, ನ್ಯಾಯೋಚಿತ ಮತ್ತು ಪಾರದರ್ಶಕವಾಗಿ ಯಾವುದೇ ಲೋಪಗಳಿಲ್ಲದೆ ನಡೆಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ಸಿಇಟಿ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು, ತ್ರಿಸದಸ್ಯ ಸಮಿತಿಗಳು ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ತಲುಪಿಸಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ವಾಚ್, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಆಭರಣಗಳನ್ನು ಧರಿಸುವಂತಿಲ್ಲ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರದ ಜತೆಗೆ ಯಾವುದಾದರೂ ಒಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಆಧಾರ್ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ) ತರಬೇಕು ಎಂದು ಮಾಹಿತಿ ನೀಡಿದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಗೈರು ಹಾಜರಾಗಿ ಬೇರೆಯವರನ್ನು ನಿಯೋಜಿಸುವಂತಿಲ್ಲ ಎಂದ ಅವರು, ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು, ಕೊಠಡಿ ಮೇಲ್ವಿಚಾರಕನ್ನು ನೇಮಿಸಲಾಗುವುದು. ಕೊಠಡಿಗೆ ಸಿಸಿ ಕೆಮರಾ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಎಲ್ಲಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಜೊತೆಗೆ ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪರೀಕ್ಷೆ ವೇಳೆ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಆದೇಶಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಕಾಲೇಜು ಪ್ರಾಂಶುಪಾಲರು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಉಪಸ್ಥಿತರಿದ್ದರು.