ಮಂಗಳೂರು/ಉಡುಪಿ, ಏ.13 (DaijiworldNews/AA): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಇಂದು ಪಾಮ್ ಸಂಡೆಯನ್ನು ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸುವ ಮೂಲಕ ಪವಿತ್ರ ವಾರದ ಆರಂಭಕ್ಕೆ ನಾಂದಿ ಹಾಡಿದರು.

















































ಕ್ರೈಸ್ತ ಬಾಂಧವರು ತಾಳೆ ಗರಿಗಳನ್ನು ಹಿಡಿದು "ಹೊಸನ್ನ" ಎಂದು ಜಪಿಸಿ ವಿವಿಧ ಚರ್ಚುಗಳಲ್ಲಿ ಒಟ್ಟುಗೂಡಿದರು. ಮಂಗಳೂರು ಮತ್ತು ಕರಾವಳಿಯ ಹಲವಾರು ಕಡೆಗಳಲ್ಲಿ ಭಕ್ತರು ಪ್ರಾರ್ಥನೆ ಮತ್ತು ಸ್ತೋತ್ರಗಳೊಂದಿಗೆ ಬೆಳಗ್ಗಿನ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡು ತೆಂಗಿನ ಗರಿಗಳನ್ನು ಹಿಡಿದುಕೊಂಡು ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಚರ್ಚ್ ಗಳಲ್ಲಿ ಯೇಸುವಿನ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡು ಬಲಿಪೂಜೆಯಲ್ಲಿ ಭಾಗವಹಿಸಿದರು. ಚರ್ಚ್ ಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಪಾಮ್ ಸಂಡೆಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಕುಂದಾಪುರ ತಾಲೂಕಿನ ಬಸ್ರೂರು ಸಂತ ಫಿಲಿಪ್ ನೆರಿ ಚರ್ಚಿನಲ್ಲಿ ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿ ಗರಿಗಳನ್ನು ಆಶೀರ್ವದಿಸಿ, ಬಲಿಪೂಜೆಯಲ್ಲಿ ಸಂದೇಶ ನೀಡಿದರು. ಈ ವೇಳೆ ಚರ್ಚ್ ನ ಪ್ರಧಾನ ಧರ್ಮಗುರು ವಂ. ರೋಯ್ ಲೋಬೊ, ಸಹಾಯಕ ಧರ್ಮಗುರು ವಂ| ವಿಲ್ಸನ್ ಸಲ್ಡಾನಾ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಎಲ್ಲ ಚರ್ಚ್ ಗಳಲ್ಲಿ ಕ್ರೈಸ್ತ ಬಾಂಧವರು ಬೆಳಗ್ಗಿನ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡು ತೆಂಗಿನ ಗರಿಗಳನ್ನು ಹಿಡಿದುಕೊಂಡು ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಚರ್ಚ್ ಗಳಲ್ಲಿ ಯೇಸುವಿನ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡು ಬಲಿಪೂಜೆಯಲ್ಲಿ ಭಾಗವಹಿಸಿದರು. ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ದೇವಾಲಯದ ಪ್ರಧಾನ ಧರ್ಮಗುರು ಹಾಗೂ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಧಾರ್ಮಿಕ ವಿಧಿವಿಧಾನದ ನೇತೃತ್ವ ವಹಿಸಿದ್ದರು.
ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಮುಚ್ಚಿರಪದವು ನಲ್ಲಿರುವ ಫಾತಿಮಾ ಮಾತೆಯ ದೇವಾಲಯದಲ್ಲಿ ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಪಾಮ್ ಸಂಡೆಯನ್ನು ಆಚರಿಸಲಾಯಿತು. ಈ ವೇಳೆ ಪವಿತ್ರ ಬಲಿಪೂಜೆಯನ್ನು ನೆರವೇರಿಸಲಾಯಿತು. ಈ ಬಲಿಪೂಜೆಯನ್ನು ಚರ್ಚ್ ಧರ್ಮಗುರುಗಳಾದ ವಂ|ಸೈಮನ್ ಡಿಸೋಜ ನೆರವೇರಿಸಿದರು.