ಮಂಗಳೂರು, ಜು. 19 (DaijiworldNews/AA): ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಮಂಗಳೂರು ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 19 ರಂದು ರಜೆ ಘೋಷಿಸಲಾಗಿದೆ. ಜೊತೆಗೆ ಉಳ್ಳಾಲ ಮತ್ತು ಬಂಟ್ವಾಳ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರಾಢಶಾಲೆಗಳಿಗೆ ಜು. 19ರಂದು ರಜೆ ಘೋಷಿಸಿ ತಹಶೀಲ್ದಾರರು ಪ್ರಕಟಣೆ ಹೊರಡಿಸಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ನೀಡಿದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡದ ಹಲವಾರು ಭಾಗಗಳಲ್ಲಿ ಶುಕ್ರವಾರ, ರಾತ್ರಿ ಮತ್ತು ಶನಿವಾರ ಬೆಳಗಿನ ಜಾವ ಭಾರೀ ಮಳೆಯಾಗಿದೆ. ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಜೊತೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಕಚೇರಿಯಲ್ಲಿ ಇರಬೇಕು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ತಾಲೂಕು ಆಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧರಾಗಿರಬೇಕು ಎಂದು ನಿರ್ದೇಶಿಸಲಾಗಿದೆ.