ಉಡುಪಿ, ಆ. 18 (DaijiworldNews/AA): ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜು, ಐಟಿಐ ಗೆ ಆ. 19ರಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಉಡುಪಿ ಜಿಲ್ಲೆಗೆ ಮುಂದಿನ ನಾಲ್ಕು ದಿನಗಳ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ, ನಿವಾಸಿಗಳು ಮತ್ತು ಪ್ರವಾಸಿಗರು ಇಬ್ಬರೂ ಕಡಲತೀರಗಳು, ನದಿಗಳು ಮತ್ತು ಜಲಪಾತಗಳ ಬಳಿಗೆ ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಮತ್ತು ಈ ಪ್ರದೇಶಗಳಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ.