ಉಡುಪಿ, ಆ. 31 (DaijiworldNews/AA): ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎಂಟು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಮೈಸೂರು ಜಿಲ್ಲೆಯ ಇಕ್ಬಾಲ್ ಅಹಮದ್ ಅನ್ಸಾರಿ ಎಂಬ ಆರೋಪಿಯನ್ನು ಆಗಸ್ಟ್ 29 ರಂದು ದುಬೈನಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ವಶಕ್ಕೆ ಪಡೆಯಲಾಗಿದೆ. ಇಮಿಗ್ರೇಶನ್ ಅಧಿಕಾರಿಗಳು ಆತನನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಶಿರ್ವ, ಮಣಿಪಾಲ ಮತ್ತು ತೀರ್ಥಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅನ್ಸಾರಿ ವಿರುದ್ಧ ಕಳ್ಳತನ ಮತ್ತು ಸಂಬಂಧಿತ ಹಲವು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳು ಇನ್ನೂ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ.
ಆರೋಪಿಯನ್ನು ಪಡುಬಿದ್ರಿ ಪೊಲೀಸ್ ಠಾಣೆಗೆ ಕರೆತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.