ಮಂಗಳೂರು, ಸೆ. 23 (DaijiworldNews/AA): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರವನ್ನು ತ್ವರಿತವಾಗಿ ಒದಗಿಸುವಂತೆ ಜಿಲ್ಲಾಧಿಕಾರಿ (ಡಿಸಿ) ದರ್ಶನ್ ಎಚ್. ವಿ. ಅವರು ನಿರ್ದೇಶನ ನೀಡಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಯ್ದೆಯಡಿ ಜಿಲ್ಲೆಯಲ್ಲಿ ದಾಖಲಾದ ಎಲ್ಲಾ ದೌರ್ಜನ್ಯ ಪ್ರಕರಣಗಳಿಗೂ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಪರಿಣಾಮಕಾರಿ ವಿಚಾರಣೆ ನಡೆಸಲು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
2025ರ ಜನವರಿ 1ರಿಂದ ಸೆಪ್ಟೆಂಬರ್ 15ರವರೆಗೆ ಜಿಲ್ಲೆಯಲ್ಲಿ ಒಟ್ಟು 42 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇದುವರೆಗೆ 34.10 ಲಕ್ಷ ರೂ.ಗಳನ್ನು ಪರಿಹಾರವಾಗಿ ವಿತರಿಸಲಾಗಿದ್ದು, 22 ಪ್ರಕರಣಗಳಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಹೇಮಲತಾ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕರ್ಬಾರಿ, ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ, ಪೊಲೀಸ್ ಉಪ ಆಯುಕ್ತ ಮಿಥುನ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಉಪಸ್ಥಿತರಿದ್ದರು.