ಬಂಟ್ವಾಳ, ನ. 01 (DaijiworldNews/AA): ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಕೂಟರ್ ಸವಾರನಿಗೆ ನವೆಂಬರ್ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.


ಪುತ್ತೂರು ತಾಲೂಕು ಬೆಟ್ಟಂಪಾಡಿ ನಿವಾಸಿ ಮನ್ಸೂರ್ (38) ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪಿ.
ಘಟನೆಯ ಹಿನ್ನೆಲೆ
ಅ.30ರಂದು ಬಿಸಿಲೆ ಘಾಟ್ ನಲ್ಲಿ ನಡೆದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ದ್ವಿಚಕ್ರ ವಾಹನ ಸವಾರ ಮನ್ಸೂರ್ ಅಂಬ್ಯುಲೆನ್ಸ್ ಸೈರನ್ ಶಬ್ದ ಕೇಳಿಯೂ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿರುವುದಾಗಿ ಆರೋಪಿಸಲಾಗಿದೆ.
ಆರೋಪಿಯು ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆರೋಪಿ ಸ್ಕೂಟರ್ ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 128/2025 ಕಲಂ: 110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ತನಿಖೆ ನಡೆಸಿದ್ದರು.