ಸುಳ್ಯ, ಡಿ. 03 (DaijiworldNews/TA): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಮಂಗಳವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಮಾಪ್ತಿಗೊಂಡಿತು.

ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ಜರಗಿತು. ಡಿ. 3ರ ಮುಂಜಾನೆ ದೇವಸ್ಥಾನದ ಪ್ರಧಾನ ಅರ್ಚಕ ವೇದ ಮೂರ್ತಿ ಸೀತಾರಾಮ ಎಡಪಡಿತ್ತಾಯರು ವಿಧಿ ವಿಧಾನ ನೆರವೇರಿಸಿದರು. ಬಳಿಕ ಕೊಪ್ಪರಿಗೆಯನ್ನು ಇಳಿಸಲಾಯಿತು. ಉತ್ಸವದ ನಿಮಿತ್ತ ಶ್ರೀ ದೇಗುಲದ ಹೊರಾಂಗಣದ ಸುತ್ತಲೂ ನೀರನ್ನು ಮಧ್ಯಾಹ್ನದ ಅನಂತರ ತುಂಬಿಸಲಾಗಿತ್ತು.
ರಾತ್ರಿ ಮಹಾ ಪೂಜೆಯ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಲ್ಲಕ್ಕಿ ಉತ್ಸವ ಆರಂಭವಾಯಿತು. ಅನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು. ಮಂಗಳವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಮುಕ್ತಾಯವಾಗಿದ್ದು ಡಿ. 3ರಂದು ಸರ್ಪಸಂಸ್ಕಾರ ಸೇವೆ ಪುನರಾರಂಭಗೊಳ್ಳಲಿದೆ.