ಬ್ರಹ್ಮಾವರ, ಡಿ. 15 (DaijiworldNews/AA): ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ನಡೆದ ಹೊಡೆದಾಟದಲ್ಲಿ ಓರ್ವ ವ್ಯಕ್ತಿ ಕೊಲೆಯಾದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಪಡುಕರೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.


ಮೃತಪಟ್ಟವರನ್ನು ಪಡುಕರೆ ನಿವಾಸಿ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ ಮದ್ಯಪಾನ ಪಾರ್ಟಿ ಮಾಡಿದ್ದ ಯುವಕರ ತಂಡವೊಂದು ಕ್ಷುಲ್ಲಕ ವಿಚಾರವಾಗಿ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ತೀವ್ರ ಹಲ್ಲೆಗೊಳಗಾದ ಸಂತೋಷ್ ಮೊಗವೀರ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರ ಸಹಕಾರದಿಂದ ಕೂಡಲೇ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮಾಹಿತಿ ತಿಳಿದ ಕೂಡಲೇ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ, ಕೋಟ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಟಿ., ಠಾಣಾ ಎಎಸ್ಐ ಮಾಂತೇಶ್ ಜಾಭಗೌಡ ಹಾಗೂ ಹೆಡ್ಕಾನ್ಸ್ಟೇಬಲ್ಗಳಾದ ಪ್ರದೀಪ್ ಮತ್ತು ಅಶೋಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಯುವಕರನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.