ಉಡುಪಿ, ಫೆ. 25 (DaijiworldNews/AA): ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಾರ್ಕಾಳದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು" ಎಂದರು.
ಚಿಕ್ಕಮಗಳೂರಿನಲ್ಲಿ ಆನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಆನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ" ಎಂದು ಮಾಹಿತಿ ನೀಡಿದರು.
ಗ್ಯಾರಂಟಿಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಗ್ಯಾರಂಟಿ ಯೋಜನೆಗಳಿಗೆ ವಾರ್ಷಕ 52,000 ಕೋಟಿ ರೂ.ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ" ಎಂದು ಹೇಳಿದರು.
ಆಗುಂಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡುವ ಬಗ್ಗೆ ಮಾತನಾಡಿದ ಅವರು, "ಇದಕ್ಕೆ ಸಂಬಂಧಿಸಿದಂತೆ ಪರಿಸರವಾದಿಗಳೊಂದಿಗೆ ಚರ್ಚಿಸಲಾಗುವುದು ಹಾಗೂ ಅನುಮತಿಗೆ ಕ್ರಮ ಕೈಗೊಳ್ಳಲಾಗುವುದು" ಎಂದರು. ಇನ್ನು "ಕಾರ್ಕಳದಲ್ಲಿ ಪರುಶರಾಮ ಥೀಂ ಪಾರ್ಕ್ ನಿರ್ಮಾಣ ಯೋಜನೆಯನ್ನು ಸಧ್ಯದಲ್ಲಿಯೇ ಪೂರ್ಣಗೊಳಿಸಲಾಗುವುದು. ಜೊತೆಗೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು" ಎಂದು ತಿಳಿಸಿದರು.