ಉಡುಪಿ, ಫೆ. 27 (DaijiworldNews/TA): ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶುಕ್ರವಾರ ಮುಂಜಾನೆಯಿಂದಲೇ ಉಡುಪಿಗೆ ಭೇಟಿ ನೀಡಿದರು. ವಿವಿಧ ಕಚೇರಿ ಹಾಗೂ ಸ್ಥಳಗಳಿಗೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.



ಮೊದಲು ನಿಟ್ಟೂರಿನಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಯನ್ನು ಕಂಡು ನಗರಸಭೆಯ ಪೌರಾಯುಕ್ತರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಘಟಕದ ನಿರ್ವಹಣೆಗೆ ಪ್ರತಿ ತಿಂಗಳು 3 ಲಕ್ಷ ರೂಪಾಯಿ ಪಡೆಯುವ ನೀವು, ತ್ಯಾಜ್ಯ ನೀರನ್ನು ಸಂಸ್ಕರಿಸದೇ ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರೊಂದಿಗೆ ಪರಿಸರ ಇಲಾಖೆಯ ಅಧಿಕಾರಿಗಳೂ ಅವರ ಕೆಂಗಣ್ಣಿಗೆ ಗುರಿಯಾದರು. ಅಲ್ಲಿಂದ ನೇರವಾಗಿ ಮಲ್ಪೆ ಬಂದರಿಗೆ ಭೇಟಿ ನೀಡಿದ ಅವರು, ಅಲ್ಲಿನ ಅಸ್ವಚ್ಛತೆ ಹಾಗೂ ಬಂದರು ಸುತ್ತಮುತ್ತ ಹರಿಯುತ್ತಿರುವ ತ್ಯಾಜ್ಯ ನೀರು ಮತ್ತು ಹರಡಿರುವ ದುರ್ವಾಸನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನಂತರ ಬನ್ನಂಜೆಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಕ್ಯಾಂಟೀನ್ನ ಅಡುಗೆ ಕೋಣೆಗೆ ತೆರಳಿ ಸ್ವಚ್ಛತೆಯನ್ನು ಪರಿಶೀಲಿಸಿದರು. ಈ ವೇಳೆ ಅಲ್ಲಿನ ಸ್ವಚ್ಛತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ, ತಮಗೆ ಇಎಸ್ಐ ಸೇರಿದಂತೆ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದು ದೂರಿದರು. ತಕ್ಷಣವೇ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳು, ಕಾರ್ಮಿಕರಿಗೆ ಕೂಡಲೇ ಇಎಸ್ಐ ಕಾರ್ಡ್ ನೀಡುವಂತೆ ಸೂಚಿಸಿದರು. ಈ ಬಗ್ಗೆ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳುವುದಾಗಿ ತಿಳಿಸಿದರು. ಇದೇ ವೇಳೆ ಸ್ಥಳೀಯರೊಂದಿಗೆ ಕೂಡ ಮಾತುಕತೆ ನಡೆಸಿ, ಸಮಸ್ಯೆಗಳನ್ನು ಆಲಿಸಿದರು. ಇಂತಹ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ವೀರಪ್ಪ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.