ಬಂಟ್ವಾಳ, ಫೆ. 28 (DaijiworldNews/TA): ಬ್ರಹ್ಮರಕೂಟ್ಟು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಮಾರ್ಚ್ 3 ರಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 12.30 ರವರೆಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ 'ಬ್ರಹ್ಮರಕೂಟ್ಟು ಟೋಲ್ ಗೇಟ್ ತೆರವು ಹೋರಾಟ ಸಮಿತಿ' ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯಲಿದೆ ಎಂದು ಮಾಜಿ ಸಚಿವ ಹಾಗೂ ಬ್ರಹ್ಮರಕೂಟ್ಟು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದರು.

ಅವರು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಟೋಲ್ ಸಂಗ್ರಹಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರೂಪಿಸಿರುವ ಹಲವು ನಿಯಮಗಳನ್ನು ಉಲ್ಲಂಘಿಸಿ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಟು ಟೋಲ್ ಕೇಂದ್ರದಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸಬೇಕು. ಟೋಲ್ ಗೇಟ್ ಅನ್ನು ತೆರವುಗೊಳಿಸಬೇಕು ಎಂಬುದು ನಮ್ಮ ಅಭಿಪ್ರಾಯ ಎಂದರು.
ಟೋಲ್ ಗೇಟ್ ವಿರೋಧಿ ಹೋರಾಟಗಾರ ಮುನೀರ್ ಕಾಟಿಪಳ್ಳ ಮಾತನಾಡಿ, ಹೆದ್ದಾರಿ ಪ್ರಾಧಿಕಾರದ ಸಭೆ ನಡೆಸಬೇಕು, ಸಾರ್ವಜನಿಕರಿಗೆ ಹೂಡಿಕೆ ಮತ್ತು ಸಂಗ್ರಹವಾದ ಬಗ್ಗೆ ಮಾಹಿತಿ ನೀಡಬೇಕು. ಸುರತ್ಕಲ್ ಹೋರಾಟದ ಹಾದಿಯಲ್ಲಿ ಬೇರೆ ಬೇರೆ ಸಂಘಟನೆಗಳ ಬೆಂಬಲ ವ್ಯಕ್ತವಾಗುತ್ತಿದ್ದು ಗಂಭೀರ ಸ್ವರೂಪದ ಹೋರಾಟಕ್ಕೆ ನಾವು ಸಿದ್ದತೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಬಿ.ಶೇಖರ್, ಮೋಹನ್ ಶೆಟ್ಟಿ, ಪಿಯೂಸ್ ಎಲ್ ರೊಡ್ರಿಗಸ್, ಕೋಶಾಧಿಕಾರಿ ಬೇಬಿ ಕುಂದರ್ ಉಪಸ್ಥಿತರಿದ್ದರು.