ಉಡುಪಿ, ಮಾ. 27 (DaijiworldNews/AA): ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಆಡಳಿತವು ಇಬ್ಬರು ವ್ಯಕ್ತಿಗಳ ವಿರುದ್ಧ ಗಡಿಪಾರು ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅವರು ಮಾರ್ಚ್ 26 ರಂದು ಈ ಆದೇಶವನ್ನು ಹೊರಡಿಸಿದ್ದಾರೆ.
ಕಾಪು ತಾಲೂಕಿನ ಕಳತ್ತೂರು ಸೂರ್ಯ ಗುಡ್ಡೆ ನಿವಾಸಿ ಮೊಹಮ್ಮದ್ ನೌಫಿಲ್ ವಿರುದ್ಧ ಶಿರ್ವ ಪೊಲೀಸ್ ಠಾಣೆಯಲ್ಲಿ ಐದು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ರೌಡಿ ಶೀಟ್ ಕೂಡ ತೆರೆಯಲಾಗಿದೆ. ಈತನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಉಡುಪಿ ತಾಲೂಕಿನ ಮಲ್ಪೆ ಕೊಡವೂರು ಗ್ರಾಮದ ಆಶೀರ್ವಾದ್ ನಿವಾಸಿ ಸುಹಾನ್ ಪೂಜಾರಿ ವಿರುದ್ಧ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈತನನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.