ಮಂಗಳೂರು, ಏ. 11 (DaijiworldNews/AA): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ 5 ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳು ನಡೆಯುತ್ತಿವೆ. ಈ ಕಾಮಗಾರಿ ಪೂರ್ಣಗೊಂಡರೆ ಜಿಲ್ಲೆಯ ಬಹುತೇಕ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರಗೊಳ್ಳಲಿದೆ. ಕೆಲವೆಡೆ ಅರಣ್ಯ, ಭೂಮಿ ಸಮಸ್ಯೆ ಕಂಡುಬಂದಿದ್ದು, ಅರಣ್ಯ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು ಎಂದರು.
ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮಾತನಾಡಿ, ಮಂಗಳೂರು ನಗರಕ್ಕೆ ನೀರು ಪೂರೈಸುವ ತುಂಬೆ ಅಣೆಕಟ್ಟಿನಲ್ಲಿ ಪ್ರಸ್ತುತ 5.5 ಮೀಟರ್ ನೀರು ಲಭ್ಯವಿದೆ. ನಗರದಲ್ಲಿ ನೀರು ಸರಬರಾಜು ಉತ್ತಮ ಸ್ಥಿತಿಯಲ್ಲಿದೆ. ಎತ್ತರದ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.