ಕಾಸರಗೋಡು, ಜೂ. 05 (DaijiworldNews/TA): ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಹವಾಮಾನ ಇಲಾಖೆ ಜಿಲ್ಲೆಗೆ ಜೂನ್ 6ರಂದು ರೆಡ್ ಅಲರ್ಟ್ ಘೋಷಿಸಿರುವುದರಿಂದ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಪ್ರೊಫೆಷನಲ್ ಕಾಲೇಜುಗಳು, ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ಅಂಗನವಾಡಿಗಳು, ಟ್ಯೂಷನ್ ಸೆಂಟರ್ಗಳು, ಐಸಿಎಸ್ಇ (ICSE), ಸಿಬಿಎಸ್ಇ (CBSE) ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು ಹಾಗೂ ಮದರಸಾಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ.
ಆದರೆ ವಸತಿ ಶಾಲೆಗಳಿಗೆ (Residential Schools) ಈ ರಜೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಪರೀಕ್ಷೆಗಳು, ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಂದರ್ಶನಗಳು ಯಥಾಸ್ಥಿತಿಯಲ್ಲಿ ನಡೆಯಲಿದ್ದು, ಅವುಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಹವಾಮಾನ ಇಲಾಖೆ ಕಾಸರಗೋಡು ಜಿಲ್ಲೆಯಲ್ಲಿ ಅತ್ಯಂತ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸಿ ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.