ಮಂಗಳೂರು, ಜೂ. 07 (DaijiworldNews/TA): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇದೇ ವೇಳೆ ಮಂಗಳೂರಿನ ಮಹಾಕಾಳಿ ಪಡ್ಪು ರೈಲ್ವೇ ಅಂಡರ್ಪಾಸ್ ಅಡಿಯಲ್ಲಿ ಮಳೆ ನೀರು ಹಾಗೂ ಕೆಸರು ನೀರು ತುಂಬಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.

ಅಂಡರ್ಪಾಸ್ನಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ದ್ವಿಚಕ್ರ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ನೀರಿನ ಮಟ್ಟ ಹೆಚ್ಚಿರುವುದರಿಂದ ವಾಹನಗಳನ್ನು ನಿಧಾನವಾಗಿ ಚಲಾಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲ ವಾಹನಗಳು ಮಧ್ಯದಲ್ಲೇ ಸ್ಥಗಿತಗೊಂಡಿರುವ ವರದಿಯೂ ಲಭ್ಯವಾಗಿದೆ.
ಕೆಸರು ಮಿಶ್ರಿತ ನೀರು ರಸ್ತೆಯಲ್ಲಿ ನಿಂತಿರುವುದರಿಂದ ವಾಹನ ಸವಾರರು ಹರಸಾಹಸ ಪಟ್ಟು ಸಂಚರಿಸುತ್ತಿರುವ ದೃಶ್ಯಗಳು ಕಂಡುಬಂದಿವೆ. ಸ್ಥಳೀಯರು ಮಳೆಗಾಲ ಆರಂಭವಾದಾಗಲೆಲ್ಲಾ ಈ ಅಂಡರ್ಪಾಸ್ನಲ್ಲಿ ನೀರು ನಿಲ್ಲುವ ಸಮಸ್ಯೆ ಎದುರಾಗುತ್ತಿದ್ದು, ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.