ಮಂಗಳೂರು, ಜು. 24 (DaijiworldNews/AA): ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜುಲೈ 25ರ ಶನಿವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗು ಖಾಸಗಿ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಮತ್ತು ಡಿಪ್ಲೊಮ ಕಾಲೇಜುಗಳಿಗೆ ಜು. 25 ರಂದು ರಜೆ ಘೋಷಿಸಲಾಗಿದೆ. ಇದನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಪ್ರಕಾರ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಜೊತೆಗೆ ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು. ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು ನಿರ್ದೇಶಿಸಲಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 1077 0824-2442590 ಸಂಪರ್ಕಿಸುವಂತೆ ಪ್ರಕಟಣೆ ಹೊರಡಿಸಲಾಗಿದೆ.