ಮಂಗಳೂರು, ಜು. 28 (DaijiworldNews/AA): ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಎಕ್ಕಾರು ಬಳಿ ಸೋಮವಾರ ಸಂಜೆ ಸಂಭವಿಸಿದೆ.

ಬಶೀರ್ ಕಿನ್ನಿಗೋಳಿ(45) ಮೃತ ದುರ್ದೈವಿ.
ದಂಪತಿ ಮುಲ್ಕಿಯ ಕೊಲ್ನಾಡಿನಲ್ಲಿ ನಡೆದ ಖಾಸಗಿ ಸಮಾರಂಭವೊಂದನ್ನು ಮುಗಿಸಿ ತಮ್ಮ ಮನೆಗೆ ವಾಪಸ್ ಹಿಂತಿರುಗುತ್ತಿದ್ದರು. ಈ ವೇಳೆ ಎಕ್ಕಾರು ಸಮೀಪ ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಖಾಸಗಿ ಸರ್ವಿಸ್ ಬಸ್, ಇವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಬಶೀರ್ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಜೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.