Karavali
ಮಂಗಳೂರು, ಉಡುಪಿಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- Sat, Aug 15 2026 04:38:58 PM
-
ಮಂಗಳೂರು/ಉಡುಪಿ, ಆ. 15 (DaijiworldNews/AA): ಮಂಗಳೂರಿನ ನೆಹರೂ ಮೈದಾನ ಹಾಗೂ ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ, ಆಗಸ್ಟ್ 15ರಂದು 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತಗಳ ವತಿಯಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.




















ಮಂಗಳೂರು

























ಉಡುಪಿಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ತೆರೆದ ವಾಹನದಲ್ಲಿ ಪರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು. ನಂತರ ಅವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಖಾದರ್, ದೇಶದ ಏಕತೆ, ಸೌಹಾರ್ದತೆ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಬೇಕು. ಯುವಜನತೆ ದೇಶಭಕ್ತಿಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬಲಿಷ್ಠ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಸರ್ಕಾರದ ವಿವಿಧ ಯೋಜನೆಗಳನ್ನು ಉಲ್ಲೇಖಿಸಿದ ಅವರು, ಐದು ಗ್ಯಾರಂಟಿ ಯೋಜನೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಲಕ್ಷಾಂತರ ಜನರು ಪ್ರಯೋಜನ ಪಡೆದಿದ್ದಾರೆ. ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಹಾಗೂ ವಿಪತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಜಿಲ್ಲೆಯಲ್ಲಾಗಿರುವ ಸುಧಾರಣೆಗಳ ಬಗ್ಗೆಯೂ ಅವರು ಪ್ರಸ್ತಾಪಿಸಿದರು.
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದ್ವಿತೀಯ ಸ್ಥಾನ ಪಡೆದಿರುವುದಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರನ್ನು ಖಾದರ್ ಅಭಿನಂದಿಸಿದರು.
ಭಾರತವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ನಾಗರಿಕರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು. 'ಜೈ ಹಿಂದ್, ಜೈ ಕರ್ನಾಟಕ' ಎಂಬ ಘೋಷಣೆಯೊಂದಿಗೆ ತಮ್ಮ ಸಂದೇಶವನ್ನು ಮುಕ್ತಾಯಗೊಳಿಸಿದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ'ಸೋಜಾ, ಎಸ್.ಎಲ್ ಭೋಜೇಗೌಡ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೇರಿದಂತೆ ಜನಪ್ರತಿನಿಧಿಗಳು, ನಿಗಮಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು
ಉಡುಪಿಯಲ್ಲಿ ದೇಶಭಕ್ತಿ, ಸೌಹಾರ್ದತೆಗೆ ಕರೆ
ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ೮೦ನೇ ಸ್ವಾತಂತ್ರ್ಯೋತ್ಸವದಲ್ಲಿ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ಪರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು.ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದ ರಿಜ್ವಾನ್ ಅರ್ಷದ್, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದವರನ್ನು ರಾಷ್ಟ್ರವು ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದರು. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಡಾ. ಬಿ.ಆರ್. ಅಂಬೇಡ್ಕರ್, ಮೌಲಾನಾ ಅಬುಲ್ ಕಲಾಂ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಲ ಗಂಗಾಧರ ತಿಲಕ್, ಲಾಲಾ ಲಜಪತ್ ರಾಯ್, ಬಿಪಿನ್ ಚಂದ್ರ ಪಾಲ್, ಲಾಲ್ ಬಹದ್ದೂರ್ ಶಾಸ್ತ್ರಿ, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್, ಸರೋಜಿನಿ ನಾಯ್ಡು ಹಾಗೂ ಡಾ. ರಾಜೇಂದ್ರ ಪ್ರಸಾದ್ ಸೇರಿದಂತೆ ಪ್ರಮುಖ ನಾಯಕರಿಗೆ ಗೌರವ ಸಲ್ಲಿಸಿದರು.
ಉಡುಪಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಕೊಡುಗೆಯನ್ನು ಸ್ಮರಿಸಿದ ಅವರು, ಶಿವರಾಮ ಕಾರಂತ, ಪಣಿಯಾಡಿ ಶ್ರೀನಿವಾಸ ಉಪಾಧ್ಯಾಯ, ಆರ್.ಎಸ್. ಶೆಣೈ, ರಾಕಿ ಫೆರ್ನಾಂಡಿಸ್, ಕೆ.ಕೆ. ಶೆಟ್ಟಿ, ಹಾಜಿ ಅಬ್ದುಲ್ಲಾ, ಅಂಬಾಬಾಯಿ ಪೈ ಹಾಗೂ ಪಾಂಗಾಳ ಮನೋರಮಾ ನಾಯಕ್ ಸೇರಿದಂತೆ ಈ ಭಾಗದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಂಡರು.
"ಭಾರತ ಶಾಂತಿ ಮತ್ತು ಸೌಹಾರ್ದತೆಯ ನಾಡು. ವಿವಿಧ ಜಾತಿ, ಧರ್ಮ, ಸಮುದಾಯ ಹಾಗೂ ಭಾಷೆಗಳ ಜನರು ಇಲ್ಲಿ ವಾಸಿಸುತ್ತಿದ್ದಾರೆ. ಭಿನ್ನತೆಗಳ ನಡುವೆಯೂ ನಾವು ಸದಾ ಏಕತೆ ಮತ್ತು ಸಹಬಾಳ್ವೆಯ ಮನೋಭಾವವನ್ನು ಕಾಪಾಡಿಕೊಂಡಿದ್ದೇವೆ" ಎಂದು ಹೇಳಿದರು.
ಕುವೆಂಪು ಅವರ ಭಾರತವನ್ನು ಎಲ್ಲ ಸಮುದಾಯಗಳಿಗೂ ಶಾಂತಿಯ ತೋಟವನ್ನಾಗಿ ಕಾಣುವ ದೃಷ್ಟಿಕೋನವನ್ನು ಉಲ್ಲೇಖಿಸಿದ ಸಚಿವರು, ಜಾತಿ, ಧರ್ಮ ಹಾಗೂ ಭಾಷೆಯ ಭೇದಗಳನ್ನು ಮೀರಿ ಸಹೋದರತ್ವ ಬೆಳೆಸಬೇಕು. ರಾಷ್ಟ್ರೀಯ ಏಕತೆ, ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ರಕ್ಷಿಸಲು ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.
ಸರ್ಕಾರದ ವಿವಿಧ ಯೋಜನೆಗಳನ್ನು ವಿವರಿಸಿದ ಸಚಿವರು, "ಸಾರ್ವಜನಿಕರ ಕುಂದುಕೊರತೆ, ಅರ್ಜಿಗಳು ಹಾಗೂ ಸಮಸ್ಯೆಗಳನ್ನು ಆಲಿಸಿ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಒದಗಿಸಲು ರಾಜ್ಯ ಸರ್ಕಾರ 'ಪ್ರಜಾ ಸೇವಾ' ಇಲಾಖೆಯನ್ನು ಸ್ಥಾಪಿಸಿದೆ. ವಿವಿಧ ಇಲಾಖೆಗಳಲ್ಲಿನ 72,186೬ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಾಗುತ್ತಿದೆ" ಎಂದು ಹೇಳಿದರು.
ಜಿಲ್ಲೆಯ ಮಳೆಯ ಪರಿಸ್ಥಿತಿಯ ಕುರಿತು ಮಾತನಾಡಿದ ಸಚಿವರು, "ಉಡುಪಿ ಜಿಲ್ಲೆಯಲ್ಲಿ ವಾಡಿಕೆಗಿಂತ ೨೯ ಶೇಕಡಾ ಮಳೆ ಕೊರತೆ ದಾಖಲಾಗಿದೆ. ಕೃಷಿ ಚಟುವಟಿಕೆಗಳಿಗೆ ರಕ್ಷಣೆ ಒದಗಿಸಲು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅತಿಯಾದ ಮಳೆಯಿಂದ ಜೀವಹಾನಿ, ಜಾನುವಾರು, ಮನೆ ಹಾಗೂ ಆಸ್ತಿಪಾಸ್ತಿ ನಷ್ಟ ಅನುಭವಿಸಿದವರಿಗೆ ಗರಿಷ್ಠ 40 ಲಕ್ಷ ರೂ.ವರೆಗೆ ಪರಿಹಾರ ನೀಡಲಾಗಿದೆ" ಎಂದರು.
ಶಿಕ್ಷಣ ಕ್ಷೇತ್ರದಲ್ಲಿನ ಉಡುಪಿ ಜಿಲ್ಲೆಯ ಸಾಧನೆಯನ್ನು ಶ್ಲಾಘಿಸಿದ ಸಚಿವರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರನ್ನು ಅಭಿನಂದಿಸಿದರು. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿಯೂ ಈ ಶ್ರೇಷ್ಠತೆಯನ್ನು ಮುಂದುವರಿಸಲು ಪ್ರಯತ್ನಿಸಬೇಕು ಎಂದರು.
"ಉಡುಪಿ ನಗರಕ್ಕೆ ದಿನದ ೨೪ ಗಂಟೆಯೂ ಕುಡಿಯುವ ನೀರು ಪೂರೈಸುವ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ. ವರಾಹಿ ನದಿಯಿಂದ ನೀರನ್ನು ಮಣಿಪಾಲದ ಜಿಎಲ್ಎಸ್ಆರ್ಗೆ ತಂದು ಪೂರೈಸುವ ಈ ಯೋಜನೆಗೆ 238.63 ಕೋಟಿ ರೂ. ಅಂದಾಜು ವೆಚ್ಚವಾಗಿದ್ದು, ಕಾಮಗಾರಿ ಶೀಘ್ರ ಪೂರ್ಣಗೊಳ್ಳುವ ನಿರೀಕ್ಷೆಯಿದೆ" ಎಂದು ತಿಳಿಸಿದರು.
"ಯುವಜನರ ಸಬಲೀಕರಣಕ್ಕೆ ಒತ್ತು ನೀಡಿದ ಸಚಿವರು, ಈ ವರ್ಷದ ಸ್ವಾತಂತ್ರ್ಯೋತ್ಸವವನ್ನು 'ಯುವ ಕರ್ನಾಟಕ, ನವ ಭಾರತ' ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ರಾಜ್ಯದಾದ್ಯಂತ ಗ್ರಾಮ ಮಟ್ಟದಲ್ಲಿ 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ" ಎಂದು ಹೇಳಿದರು.
"ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಗಳ ಪ್ರಯೋಜನಗಳು ಸಮಾಜದ ಪ್ರತಿಯೊಂದು ವರ್ಗಕ್ಕೂ ತಲುಪುವಂತೆ ಮಾಡುವುದು ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿ" ಎಂದು ನುಡಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಬಿದ್ದಿರುವ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯಕ್ಕೆ ನೆರವಾಗುವ 'ಉಡುಪಿ ಸಿವಿಕ್ ವಾಚ್ ಆ್ಯಪ್' ಅನ್ನು ಅನಾವರಣಗೊಳಿಸಲಾಯಿತು. ಸ್ವಚ್ಛತೆಗೆ ಆದ್ಯತೆ ನೀಡುವ ಉದ್ದೇಶದಿಂದ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
ಜಿಲ್ಲಾಡಳಿತವು ವಿ-ಕೇರ್ ಸೊಸೈಟಿಯ ಸಹಯೋಗದಲ್ಲಿ ವೈಜ್ಞಾನಿಕ ಹೂ ತ್ಯಾಜ್ಯ ನಿರ್ವಹಣಾ ಯೋಜನೆಯನ್ನೂ ಕೈಗೆತ್ತಿಕೊಂಡಿದೆ. ಜಿಲ್ಲೆಯ ದೇವಾಲಯಗಳಲ್ಲಿ ಪ್ರತಿದಿನ ಬಳಕೆಯಾಗುವ ಹೂವುಗಳನ್ನು ಎಲ್ಲೆಂದರಲ್ಲಿ ಎಸೆಯದೆ ವೈಜ್ಞಾನಿಕವಾಗಿ ಸಂಗ್ರಹಿಸಿ, ಪರಿಸರ ಸ್ನೇಹಿ ಹಾಗೂ ಬಿದಿರು ರಹಿತ ಅಗರಬತ್ತಿ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸುವ ಯೋಜನೆಯನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು.
ಉಡುಪಿ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಮ್ಯಾಸ್ಕಾಟ್ವೊಂದನ್ನು ಸಹ ಅನಾವರಣಗೊಳಿಸಲಾಯಿತು. ಜಿಲ್ಲೆಯ ಕಲೆ, ಸಂಸ್ಕೃತಿ, ಪರಂಪರೆ, ಜೀವನಶೈಲಿ ಹಾಗೂ ವಿಶಿಷ್ಟ ಗುರುತನ್ನು ಪ್ರತಿಬಿಂಬಿಸುವ ಮೂಲಕ ಪ್ರವಾಸಿಗರಿಗೆ ಉಡುಪಿಯ ಆಕರ್ಷಣೆಗಳನ್ನು ಪರಿಚಯಿಸುವುದು ಇದರ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ ನಗರದ ಉನ್ನತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿ ನೃತ್ಯ ಸ್ಪರ್ಧೆಯನ್ನೂ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಸಿಇಒ ಪ್ರತೀಕ್ ಬಯಲ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಕಾಂಗ್ರೆಸ್ ಮುಖಂಡ ಮಂಜುನಾಥ್ ಭಂಡಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.