ಮಂಗಳೂರು, ಅ.10 (DaijiworldNews/TA): ದಕ್ಷಿಣ ಕನ್ನಡ ಜಿಲ್ಲೆಯ ಅಡಕೆ ಹಾಗೂ ಇತರ ಬೆಳೆಗಾರರಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ಪಾವತಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರಿನ ಪುರಭವನದ ಮಿನಿ ಸಭಾಂಗಣದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಜಿಲ್ಲೆಯ ರೈತರಿಗೆ ಬೆಳೆ ವಿಮಾ ಪರಿಹಾರದಲ್ಲಿ ಆಗಿರುವ ಅನ್ಯಾಯದ ಕುರಿತು ಬಿಜೆಪಿ ಎತ್ತಿರುವ ಪ್ರಶ್ನೆಗಳಿಗೆ ರಾಜ್ಯದ ಯಾವೊಬ್ಬ ಸಚಿವ ಅಥವಾ ಕಾಂಗ್ರೆಸ್ ನಾಯಕನ ಬಳಿ ಉತ್ತರವಿಲ್ಲ. ಹತ್ತಕ್ಕೆ ಹತ್ತೂ ಸುಳ್ಳು ಹೇಳುವ ತಂತ್ರವನ್ನು ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಮಂಗಳೂರಿನಲ್ಲಿ ಕ್ಯಾಬಿನೆಟ್ ನಡೆಸಿ ರೂ.32,000 ಕೋಟಿ ಹೂಡಿಕೆಯ ಮಾತಾಡುವ ಮುಖ್ಯಮಂತ್ರಿ ಹಾಗೂ ಸಚಿವರಿಗೆ, ಕಳೆದ 3-4 ತಿಂಗಳಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ರೂ.2,000 ಹಣ ನೀಡಲು ಸಾಧ್ಯವಾಗಿಲ್ಲ. ಕ್ಯಾಬಿನೆಟ್ಗಾಗಿ ಮಂಗಳೂರಿನ ಹೈಟೆಕ್ ರಸ್ತೆಗಳಲ್ಲಿ ಮೆರವಣಿಗೆ ಮಾಡುವುದಲ್ಲ, ಚಾರ್ಮಾಡಿ ಘಾಟ್ ಅಥವಾ ಕಾಡಂಚಿನ ಗ್ರಾಮಗಳಲ್ಲಿ ಕ್ಯಾಬಿನೆಟ್ ಸಭೆ ನಡೆಸಿ ರೈತರ ನರಕ ಯಾತನೆಯನ್ನು ಕಣ್ಣಾರೆ ನೋಡಲಿ ಎಂದು ಆಗ್ರಹಿಸಿದರು.
ಇದೇ ವೇಳೆ ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವರು ಮಾತನಾಡಿದರು. ಸಭೆಯ ಬಳಿಕ ಬಿಜೆಪಿಯ ಎಲ್ಲ ಜನಪ್ರತಿನಿಧಿಗಳು ಹಾಗೂ ನಾಯಕರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ರೈತರ ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.