ಪುತ್ತೂರು, ಅ.12 (DaijiworldNews/AA): ಅಕ್ಟೋಬರ್ 5 ರಂದು ವರದಿಯಾದ ಅಕ್ರಮ ಗೋ ಸಾಗಾಟ ಪ್ರಕರಣದ ಆರೋಪಿ ಶಿವಪ್ರಸಾದ್ಗೆ ಸೇರಿದ ಮನೆ ಮತ್ತು ಸುತ್ತಮುತ್ತಲಿನ ಆವರಣದಲ್ಲಿದ್ದ ದನಗಳ ಕೊಟ್ಟಿಗೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.


ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ: 125/2026 ಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 8 ರಂದು ಈ ಜಪ್ತಿ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ ಶಿವಪ್ರಸಾದ್, ಅಗತ್ಯ ದಾಖಲೆಗಳು ಮತ್ತು ಅನುಮತಿಗಳಿಲ್ಲದೆ ತನ್ನ ಮನೆಯಲ್ಲಿದ್ದ ಜಾನುವಾರುಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳದ ಕಡೆಗೆ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಮತ್ತು ಸಿಬ್ಬಂದಿ ಅಕ್ಟೋಬರ್ 5 ರಂದು ಬಾಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ 11 ದನಗಳನ್ನು ಹಿಂಸಾತ್ಮಕವಾಗಿ ಕಟ್ಟಿಹಾಕಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ಪೊಲೀಸರು ವಾಹನವನ್ನು ತಡೆದ ತಕ್ಷಣ ಚಾಲಕ ಹಾಗೂ ಮತ್ತೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅಗತ್ಯ ಪರವಾನಗಿಗಳಿಲ್ಲದೆ ಮಾಂಸ ಮಾರಾಟಕ್ಕಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಕಾರಣಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಾನುವಾರು ಸಾಗಾಟ ಪ್ರಕರಣದಲ್ಲಿ ಪೊಲೀಸ್ ಕಾರ್ಯಾಚರಣೆಯ ವೇಳೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ನಂತರ ಸಂಪ್ಯ ಪೊಲೀಸರು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪರವಾನಗಿ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಲಾಗಿದೆ ಎನ್ನಲಾದ ಶಿವಪ್ರಸಾದ್ ಅವರ ಮನೆಯಲ್ಲಿ ಪೊಲೀಸರು ಮಹಜರು ನಡೆಸಿದ್ದರು. ತನಿಖೆ ಮುಂದುವರಿದಂತೆ, ಅಗತ್ಯ ಅನುಮತಿಯಿಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪಿಕಪ್ ವಾಹನದ ಚಾಲಕ ಹಾಗೂ ಪರಾರಿಯಾಗಿದ್ದ ಮತ್ತೊಬ್ಬ ವ್ಯಕ್ತಿಗಾಗಿ ಪತ್ತೆ ಹಚ್ಚುವ ಪ್ರಯತ್ನವನ್ನು ಮುಂದುವರೆಸಿದ್ದ ಪೊಲೀಸರು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಸರೋಳಿ ನಿವಾಸಿ ಹಸ್ಪರ್ ಅಲಿಯಾಸ್ ಅಮ್ಮಿ ಮತ್ತು ಕೆದಿಲ ಗ್ರಾಮದ ಸತ್ತಿಕಲ್ಲು ನಿವಾಸಿ ಇಬ್ರಾಹಿಂ ಮಾಡಲಾ ಬಂಧಿತರಾಗಿದ್ದಾರೆ.
ಇನ್ನು ಆರೋಪಿ ಶಿವಪ್ರಸಾದ್ಗೆ ಸೇರಿದ ಮನೆಯಲ್ಲಿ ಮಹಜರು ನಡೆಸಿದ ನಂತರ, ಅಗತ್ಯ ಪರವಾನಗಿ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ್ದ ಆರೋಪದ ಮೇರೆಗೆ ಪೊಲೀಸರು ನಿಯಮಾನುಸಾರ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.