ಮಂಗಳೂರು, ಅ.12 (DaijiworldNews/TA): ಹೈಕೋರ್ಟ್ ಪೀಠ ಸ್ಥಾಪನೆ ವಿಚಾರದಲ್ಲಿ 18 ವರ್ಷಗಳ ಹಿಂದೆಯೇ ಬೀಜ ಬಿತ್ತಿದ್ದೆವು. ಕಾರಣಾಂತರಗಳಿಂದ ಅದು ಒಂದು ಹಂತಕ್ಕೆ ತಲುಪಲು ಸಾಧ್ಯವಾಗಿರಲಿಲ್ಲ. ಆದರೆ ಇಚ್ಛಾಶಕ್ತಿ ಇದ್ದರೆ ಗುರಿ ಮುಟ್ಟಲು ಸಾಧ್ಯ ಎಂಬುದನ್ನು ಮನಗಂಡೆವು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ತಿಳಿಸಿದರು.

ಅವರು ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಕುರಿತು ಜನಪ್ರತಿನಿಧಿಗಳು ಹಾಗೂ ಪಾಲುದಾರ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಮಂಗಳೂರಿನಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು. ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿಯ ಭೂಸ್ವಾಧೀನ ಪ್ರಕರಣಗಳು ಮತ್ತು ಮೂಲಗೇಣಿ ಹಕ್ಕುಗಳಿಗೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ದ.ಕ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸುಮಾರು 40ರಷ್ಟು ಪ್ರಕರಣಗಳು ಹೈಕೋರ್ಟ್ ನಲ್ಲಿ ಹಲವು ವರ್ಷಗಳಿಂದ ಇತ್ಯರ್ಥಕ್ಕೆ ಬಾಕಿ ಇದೆ. ದಾವೆದಾರರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ ಎಂದು ತಿಳಿಸಿದರು.