ಮಂಗಳೂರು, ಜ 12: ಬಿಜೆಪಿ, ಆರ್.ಎಸ್.ಎಸ್, ಬಜರಂಗದಳದವರು ಉಗ್ರಗಾಮಿಗಳು ಎಂದು ಸಿಎಂ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಮುಗಿಬಿದ್ದು ಪ್ರತಿಭಟಿಸಿದ ಘಟನೆ ನಡೆಯಿತು.
ಸಿಎಂ ಸಿದ್ದರಾಮಯ್ಯ ನೀಡಿದ ಉಗ್ರಗಾಮಿ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಈ ಹೇಳಿಕೆಯನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಬಿಜೆಪಿ ಜೈಲು ಭರೋ ಹೋರಾಟಕ್ಕೆ ಕರೆ ನೀಡಿದ್ದು, ಮಂಗಳೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಹೋರಾಟ ನಡೆಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದು ಬಳಿಕ ಬಿಡುಗಡೆಗೊಳಿಸಿದ್ದಾರೆ.