ಉಳ್ಳಾಲ, ಅ.31 (DaijiworldNews/TA): ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧದ ಪ್ರತಿಭಟನೆಯ ಕಾವು ಇದೀಗ ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೆ.ಸಿ. ರೋಡ್ ಜಂಕ್ಷನ್ನಲ್ಲಿ ಎಸ್ಐಆರ್ ಪ್ರಕ್ರಿಯೆ ವಿರೋಧಿಸಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ತಿರಂಗಾ ಯಾತ್ರೆ ಮತ್ತು ಪ್ರತಿಭಟನಾ ಸಮಾವೇಶ ನಡೆಯಿತು.

ಜನತಂತ್ರದ ರಕ್ಷಣೆ, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂಯುಕ್ತ ನಾಗರಿಕ ವೇದಿಕೆ, ಉಳ್ಳಾಲ ಇದರ ನೇತೃತ್ವದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು. ಹೋರಾಟದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹೋರಾಟಗಾರ್ತಿ ಹಾಗೂ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರು ತಮ್ಮ ಹೋರಾಟದ ಗೀತೆಗಳ ಮೂಲಕ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸಮಾವೇಶದಲ್ಲಿ ವಿವಿಧ ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ನಾಗರಿಕ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಇದಕ್ಕೂ ಮುನ್ನ ನೂರಾರು ಪ್ರತಿಭಟನಾಕಾರರು ರಾಷ್ಟ್ರಧ್ವಜ ಹಿಡಿದು ಬೃಹತ್ ತಿರಂಗಾ ಮೆರವಣಿಗೆ ನಡೆಸಿದರು. ಎಸ್ಐಆರ್ ಪ್ರಕ್ರಿಯೆ ಮತ್ತು ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗಾಗಿ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿದರು.