ಬ್ರಹ್ಮಾವರ, ನ.02 (DaijiworldNews/AA): ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಭಾನುವಾರ ಬ್ರಹ್ಮಾವರ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ, ಕೃಷಿ-ತೋಟಗಾರಿಕಾ ಕ್ಷೇತ್ರದ ಸವಾಲುಗಳು ಹಾಗೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ಸ್ಥಳೀಯ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು.





ಬಾರ್ಕೂರು ಪಂಚಲಿಂಗೇಶ್ವರ ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಗ್ಗಿ ಸುಧಾಕರ್ ಶೆಟ್ಟಿ ಅವರ ನೇತೃತ್ವದಲ್ಲಿ ಈ ಭೇಟಿಯನ್ನು ಆಯೋಜಿಸಲಾಗಿತ್ತು.
ಸಚಿವರು ಮೊದಲಿಗೆ ಕರ್ಜೆ ಪ್ರದೇಶಕ್ಕೆ ಭೇಟಿ ನೀಡಿ, ಸುಗ್ಗಿ ಸುಧಾಕರ್ ಶೆಟ್ಟಿ ಅವರ ಕೃಷಿ ಭೂಮಿಯನ್ನು ವೀಕ್ಷಿಸಿದರು. ಈ ವೇಳೆ ರೈತರು ಹಾಗೂ ಸ್ಥಳೀಯ ಪ್ರಮುಖರೊಂದಿಗೆ ಸಂವಾದ ನಡೆಸಿ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ರೈತರಿಂದ ಸಲಹೆಗಳನ್ನು ಸ್ವೀಕರಿಸಿದ ಸಚಿವರು, ಸರ್ಕಾರ ಮಟ್ಟದಲ್ಲಿ ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.
ಬಳಿಕ ಐತಿಹಾಸಿಕ ಸೂರಾಲು ಅರಮನೆಗೆ ಭೇಟಿ ನೀಡಿದ ಸಚಿವರು, ಅರಮನೆಯ ಸಾಂಸ್ಕೃತಿಕ ಹಾಗೂ ಐತಿಹಾಸಿಕ ಮಹತ್ವದ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಸಚಿವರು ಬಾರ್ಕೂರು ಪಂಚಲಿಂಗೇಶ್ವರ ದೇವಾಲಯ, ಕತ್ತಲೆ ಬಸದಿ, ಸೈಂಟ್ ಪೀಟರ್ ಚರ್ಚ್ ಹಾಗೂ ಮಲೀಕ್ ದಿನಾರ್ ಜುಮ್ಮಾ ಮಸೀದಿಗೆ ಭೇಟಿ ನೀಡಿದರು. ಪಂಚಲಿಂಗೇಶ್ವರ ದೇವಾಲಯದಲ್ಲಿ ಅರ್ಚಕರು ಹಾಗೂ ಪ್ರಮುಖರು ದೇವಾಲಯದ ಇತಿಹಾಸ ಮತ್ತು ಧಾರ್ಮಿಕ ಪರಂಪರೆಯ ಬಗ್ಗೆ ವಿವರಿಸಿದರು.
ಬಾರ್ಕೂರು ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಸಚಿವರು ನೀಡಿದ್ದ ಭರವಸೆಗಳು ಹಾಗೂ ಸರ್ಕಾರಿ ಮಟ್ಟದಲ್ಲಿ ಆಗಿರುವ ಪ್ರಗತಿಯ ಕುರಿತು ಸುಗ್ಗಿ ಸುಧಾಕರ್ ಶೆಟ್ಟಿ ಅವರು ಸಚಿವರ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸಚಿವ ರಿಜ್ವಾನ್ ಅರ್ಷದ್, ಸಂಬಂಧಪಟ್ಟ ಇಲಾಖೆಗಳಿಂದ ಮಾಹಿತಿ ಪಡೆದು ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರದ ಹಂತದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ. ಎ. ಗಫೂರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ, ಬಾರ್ಕೂರು ಪಂಚಲಿಂಗೇಶ್ವರ ದೇವಾಲಯ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಶ್ರೀನಿವಾಸ ಶೆಟ್ಟಿ, ಬಾರ್ಕೂರು ಶಾಂತಾರಾಮ ಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.