ಬಂಟ್ವಾಳ, ನ.03 (DaijiworldNews/TA): ಪುರಸಭೆ ವ್ಯಾಪ್ತಿಯ ಕುಡಿಯುವ ನೀರಿನ ಶುದ್ಧೀಕರಣ ಘಟಕದಲ್ಲಿ ಪಾಚಿ ಹಾಗೂ ಕೆಸರು ತುಂಬಿಕೊಂಡು ಅಶುದ್ಧ ನೀರು ಸರಬರಾಜಾಗುತ್ತಿದೆ ಎಂಬ ಸಾರ್ವಜನಿಕರ ದೂರಿಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ದಿಢೀರ್ ಭೇಟಿ ಹಾಗೂ ಅಧಿಕಾರಿಗಳಿಗೆ ನೀಡಿದ ಖಡಕ್ ಎಚ್ಚರಿಕೆಯ ಬೆನ್ನಲ್ಲೇ ಪುರಸಭೆ ಎಚ್ಚೆತ್ತುಕೊಂಡಿದ್ದು, ಬುಧವಾರ ಬೆಳಗ್ಗೆಯಿಂದಲೇ ಸ್ವಚ್ಛತಾ ಕಾರ್ಯ ಆರಂಭಿಸಿದೆ.

ಕುಡಿಯುವ ನೀರಿನ ಶುದ್ಧೀಕರಣ ಘಟಕದ ನಿರ್ವಹಣೆ ಸಮರ್ಪಕವಾಗಿಲ್ಲ, ಘಟಕದಲ್ಲಿ ಪಾಚಿ ಮತ್ತು ಕೆಸರು ತುಂಬಿಕೊಂಡಿದ್ದು, ಇದರಿಂದ ಜನರಿಗೆ ಅಶುದ್ಧ ನೀರು ಪೂರೈಕೆಯಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಘಟಕಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಈ ವೇಳೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಶಾಸಕರು, ಜಿಲ್ಲಾಧಿಕಾರಿ ಹಾಗೂ ಪುರಸಭೆ ಮುಖ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಎರಡು ದಿನಗಳೊಳಗೆ ಘಟಕವನ್ನು ಸ್ವಚ್ಛಗೊಳಿಸದಿದ್ದರೆ ತಾವೇ ಖುದ್ದಾಗಿ ಸ್ಥಳದಲ್ಲಿ ನಿಂತು ಸ್ವಚ್ಛತಾ ಕಾರ್ಯ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಶಾಸಕರ ಈ ಖಡಕ್ ಎಚ್ಚರಿಕೆಗೆ ತಕ್ಷಣ ಸ್ಪಂದಿಸಿರುವ ಪುರಸಭೆ, ಪೌರ ಕಾರ್ಮಿಕರ ಮೂಲಕ ಘಟಕದಲ್ಲಿರುವ ಕೆಸರು ಮತ್ತು ಪಾಚಿಯನ್ನು ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದೆ.
ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ಸ್ಥಳೀಯ ಆಡಳಿತದ ಪ್ರಮುಖ ಜವಾಬ್ದಾರಿಯಾಗಿದೆ. ಕೇವಲ ಶಾಸಕರ ಭೇಟಿ ಅಥವಾ ಸಾರ್ವಜನಿಕರ ದೂರು ಬಂದಾಗ ಮಾತ್ರ ಸ್ವಚ್ಛತಾ ಕಾರ್ಯ ನಡೆಸದೆ, ಶುದ್ಧೀಕರಣ ಘಟಕದ ನಿರಂತರ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ. ಜನರ ಆರೋಗ್ಯದ ದೃಷ್ಟಿಯಿಂದ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಯಾವುದೇ ಲೋಪವಿಲ್ಲದೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಪುರಸಭೆ ಅಧಿಕಾರಿಗಳು ಗಮನಹರಿಸಬೇಕೆಂಬ ಆಗ್ರಹವೂ ಕೇಳಿಬಂದಿದೆ.