ಬಂಟ್ವಾಳ, ನ.05 (DaijiworldNews/TA): ರಾಜ್ಯ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಂಟ್ವಾಳ ಶಾಸನಸಭಾ ಕ್ಷೇತ್ರದ ಅಮ್ಟಾಡಿ ಹಾಗೂ ಕುರಿಯಾಳ ಶಕ್ತಿ ಕೇಂದ್ರಗಳ ವತಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಎಂಬ ಘೋಷವಾಕ್ಯದಡಿ ಬೃಹತ್ ಪಾದಯಾತ್ರೆ ಮತ್ತು ಪ್ರತಿಭಟನೆ ಗುರುವಾರ ನಡೆಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯ ನಾಯಕ ವಿಕಾಸ್ ಪುತ್ತೂರು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದಲ್ಲಾಗಿರುವ ಲೋಪಗಳ ಕುರಿತು ವಿವರಿಸಿದರು. ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರೆ, ಬಿಜೆಪಿ ಕ್ಷೇತ್ರಾಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಸಾಂದರ್ಭಿಕವಾಗಿ ಮಾತನಾಡಿದರು.
ವಿವಿಧ ಪಿಂಚಣಿ ಯೋಜನೆಗಳ ಸೌಲಭ್ಯ ಸಿಗದೆ ವಂಚಿತರಾಗಿರುವ ಸಂತ್ರಸ್ತರು ಹಾಗೂ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಯ ಬಳಿಕ ಅಮ್ಟಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಅಮ್ಟಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ ಪಡು ಕಾರ್ಯಕ್ರಮ ನಿರೂಪಿಸಿದರು.