ಉಡುಪಿ, ನ.06 (DaijiworldNews/AA): ಜಿಲ್ಲೆಯಲ್ಲಿ ಮಾದಕ ದ್ರವ್ಯ ಹಾವಳಿ ತಡೆಯಲು ಸಾರ್ವಜನಿಕರಿಂದ ರಹಸ್ಯ ಮಾಹಿತಿ ಸಂಗ್ರಹಿಸಲು ಪೊಲೀಸ್ ಇಲಾಖೆ ಅಭಿವೃದ್ಧಿಪಡಿಸಿರುವ 'ಕ್ಯೂಆರ್ ಕೋಡ್' ಅನ್ನು ವ್ಯಾಪಕವಾಗಿ ಬಳಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಎನ್ಸಿಒಆರ್ಡಿ(ನಾರ್ಕೋ ಕೋ ಆರ್ಡಿನೇಷನ್ ಸೆಂಟರ್) ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
"ಜಿಲ್ಲೆಯನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಡ್ರಗ್ಸ್ ಮಾರಾಟ, ಸಾಗಾಟ ಅಥವಾ ಸೇವನೆ ಕಂಡುಬಂದರೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಗೌಪ್ಯವಾಗಿ ಮಾಹಿತಿ ನೀಡಬಹುದು. ಮಾಹಿತಿ ನೀಡುವವರ ಗುರುತನ್ನು ಕಡ್ಡಾಯವಾಗಿ ಗೌಪ್ಯವಾಗಿಡಬೇಕು" ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಮಾದಕ ದ್ರವ್ಯಗಳ ಸೇವನೆಯಿಂದ ಆರೋಗ್ಯ, ಆರ್ಥಿಕತೆ ಮತ್ತು ಭವಿಷ್ಯದ ಮೇಲಾಗುವ ದುಷ್ಪರಿಣಾಮಗಳನ್ನು ಉಲ್ಲೇಖಿಸಿದ ಅವರು, ಯುವಜನತೆ ಇಂತಹ ಚಟಗಳಿಗೆ ಬಲಿಯಾಗುವುದನ್ನು ತಡೆಯಲು ಸಮಾಜ ಸಹಕರಿಸಬೇಕು ಎಂದರು.
"ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶೋಪ್ ಗಳಲ್ಲಿ ಮಾದಕ ಗುಣ ಹೊಂದಿರುವ ಔಷಧಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಬಾರದು. 'ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಔಷಧ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ' ಎಂಬ ಸೂಚನಾ ಫಲಕವನ್ನು ಪ್ರತಿ ಮೆಡಿಕಲ್ನಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ಮೆಡಿಕಲ್ ಅಂಗಡಿಗಳಲ್ಲಿರುವ ಸಿಸಿಟಿವಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿರಬೇಕು ಮತ್ತು ಕನಿಷ್ಠ 3 ತಿಂಗಳ ದೃಶ್ಯಾವಳಿಗಳನ್ನು ಭದ್ರವಾಗಿಡಬೇಕು. ಔಷಧ ನಿಯಂತ್ರಕರು ಮತ್ತು ಪೊಲೀಸ್ ಇಲಾಖೆ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು" ಎಂದು ಸ್ವರೂಪ ಟಿ. ಕೆ. ಹೇಳಿದರು. ಮೆಡಿಕಲ್ ಅಂಗಡಿಗಳಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕೆಮ್ಮಿನ ಸಿರಪ್ ಖರೀದಿಸುವವರ ಮೇಲೆಯೂ ನಿಗಾ ಇಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
"ಶಾಲೆ ಮತ್ತು ಕಾಲೇಜುಗಳ ವಸತಿನಿಲಯಗಳಲ್ಲಿ (ಹಾಸ್ಟೆಲ್) ರಕ್ತ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು. ಕಡಿಮೆ ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಿ, ಅವರಿಗೂ ಮತ್ತು ಅವರ ಪೋಷಕರಿಗೂ ಕೌನ್ಸಿಲಿಂಗ್ ನೀಡಬೇಕು" ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು.
"ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಬೀದಿ ನಾಟಕ, ಸಂಗೀತ, ಕಲೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಬೇಕು. ಅಲ್ಲದೆ, ಗ್ರಾಮ ಪಂಚಾಯಿತಿಗಳು ತಮ್ಮ ಗ್ರಾಮಗಳನ್ನು ತಂಬಾಕು ಮುಕ್ತಗೊಳಿಸಲು ಶ್ರಮಿಸಬೇಕು" ಎಂದು ಸೂಚಿಸಿದರು.
"ಗಾಂಜಾ ಬೆಳೆಯಲಾಗುತ್ತಿದೆಯೇ ಎಂಬುದನ್ನು ಪತ್ತೆಹಚ್ಚಲು ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕೃಷಿ ಭೂಮಿ, ತೋಟಗಳು ಮತ್ತು ಅರಣ್ಯದ ಅಂಚಿನ ಪ್ರದೇಶಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಬೇಕು. ರೈಲ್ವೇ ನಿಲ್ದಾಣಗಳಲ್ಲಿ ಮಾದಕ ದ್ರವ್ಯ ಸಾಗಾಟದ ಬಗ್ಗೆ ತೀವ್ರ ನಿಗಾ ವಹಿಸಬೇಕು ಹಾಗೂ ಅಲ್ಲೂ ಕ್ಯೂಆರ್ ಕೋಡ್ ಪ್ರಚಾರ ಪಡಿಸಬೇಕು" ಎಂದು ತಿಳಿಸಿದರು.
ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಅಡಿಯಲ್ಲಿ 25 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿದ್ದು, ಅದರ ಎಲ್ಲಾ ಸಂಸ್ಥೆಗಳಲ್ಲಿ ಮಾದಕ ದ್ರವ್ಯದ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.
"ಶಾಲೆ, ಕಾಲೇಜು, ಹಾಸ್ಟೆಲ್, ಬಸ್ ನಿಲ್ದಾಣ, ಸರ್ಕಾರಿ ಕಚೇರಿ, ಸಭಾಂಗಣ, ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆ, ಮೆಡಿಕಲ್ ಶಾಪ್ ಹಾಗೂ ಇತರ ಜನನಿಬಿಡ ಪ್ರದೇಶಗಳಲ್ಲಿ ಕ್ಯೂಆರ್ ಕೋಡ್ಗಳನ್ನು ಎದ್ದು ಕಾಣುವಂತೆ ಪ್ರದರ್ಶಿಸಬೇಕು" ಎಂದು ಹೇಳಿದರು. ಹಿಂದಿನ ಸಭೆಯಲ್ಲಿ ಸೂಚನೆ ನೀಡಿದ್ದರೂ ಕ್ಯೂಆರ್ ಕೋಡ್ ಪ್ರದರ್ಶನ ಪೂರ್ಣಪ್ರಮಾಣದಲ್ಲಿ ಜಾರಿಯಾಗದಿರುವ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರು 'ತಂಬಾಕು ಮುಕ್ತ ಯುವ ಅಭಿಯಾನ 4.0' ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿಹೆಚ್ಒ ಡಾ. ಬಸವರಾಜ್ ಹುಬ್ಬಳಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.