ಮಂಗಳೂರು, ನ.08 (DaijiworldNews/TA): ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ (ಎಂಐಒ) ಸಂಸ್ಥೆಯ ನಿರ್ದೇಶಕ ಹಾಗೂ ಖ್ಯಾತ ಕ್ಯಾನ್ಸರ್ ತಜ್ಞ ಡಾ. ಡಿ. ಸುರೇಶ್ ರಾವ್ ಅವರನ್ನು ಶನಿವಾರ ಮಂಗಳೂರಿನಲ್ಲಿ ಅಭಿನಂದಿಸಿ ಗೌರವಿಸಲಾಯಿತು.



ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಲ್ಲಿಸುತ್ತಿರುವ ವಿಶಿಷ್ಟ ಸೇವೆ, ರೋಗಿಗಳ ಆರೈಕೆಯಲ್ಲಿ ತೋರುತ್ತಿರುವ ಬದ್ಧತೆ ಹಾಗೂ ಮಾನವೀಯ ಕಾಳಜಿಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ಲಭಿಸಿದೆ. ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಯನ್ನು ಒದಗಿಸುವುದರ ಜೊತೆಗೆ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೂ ಚಿಕಿತ್ಸಾ ಸೌಲಭ್ಯ ತಲುಪಿಸುವಲ್ಲಿ ಡಾ. ಸುರೇಶ್ ರಾವ್ ಅವರ ಕೊಡುಗೆ ಮಹತ್ವದ್ದಾಗಿದೆ.
ಸಮಾರಂಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಕ್ಯಾನ್ಸರ್ನಿಂದ ಬಳಲುತ್ತಿರುವ ರೋಗಿಗಳು ಹಾಗೂ ಅವರ ಕುಟುಂಬದವರಲ್ಲಿ ಆತ್ಮವಿಶ್ವಾಸ ಮತ್ತು ಭರವಸೆ ಮೂಡಿಸುವುದು ವೈದ್ಯಕೀಯ ಕ್ಷೇತ್ರದ ಪ್ರಮುಖ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಕರಾವಳಿ ಭಾಗದಲ್ಲಿ ಡಾ. ಸುರೇಶ್ ರಾವ್ ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ. ವೈದ್ಯಕೀಯ ಸೇವೆಯನ್ನು ಕೇವಲ ವೃತ್ತಿಯಾಗಿ ಪರಿಗಣಿಸದೆ, ಮಾನವೀಯ ಕಾಳಜಿಯೊಂದಿಗೆ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ಅವರ ಕಾರ್ಯ ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.
ದೈಜಿ ವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ, ಜನರ ನೋವುಗಳಿಗೆ ಸ್ಪಂದಿಸುತ್ತಾ, ರೋಗಿಗಳ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಡಾ. ಸುರೇಶ್ ರಾವ್ ಅವರಿಗೆ ಅರ್ಹವಾಗಿಯೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಡಿ. ಸುರೇಶ್ ರಾವ್, ಈ ಪ್ರಶಸ್ತಿ ತಮ್ಮ ವೈಯಕ್ತಿಕ ಸಾಧನೆಯಲ್ಲ. ಸಂಸ್ಥೆಯ ವೈದ್ಯರು, ಸಿಬ್ಬಂದಿ ಹಾಗೂ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇಡೀ ತಂಡದ ಸಾಮೂಹಿಕ ಪ್ರಯತ್ನಕ್ಕೆ ಸಂದ ಗೌರವವಾಗಿದೆ. ಇಂತಹ ಪ್ರಶಸ್ತಿಗಳು ವೈದ್ಯಕೀಯ ಕ್ಷೇತ್ರದಲ್ಲಿ ಇನ್ನಷ್ಟು ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಲು ಪ್ರೇರಣೆ ನೀಡುತ್ತವೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಮಾತನಾಡಿದ ಇತರ ಗಣ್ಯರು, ಡಾ. ಸುರೇಶ್ ರಾವ್ ಅವರ ವೈದ್ಯಕೀಯ ಸೇವೆ, ಸಿಬ್ಬಂದಿ ಹಾಗೂ ರೋಗಿಗಳೊಂದಿಗೆ ಅವರು ಹೊಂದಿರುವ ಆತ್ಮೀಯ ಸಂಬಂಧ ಮತ್ತು ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಡಾ. ಸುರೇಶ್ ರಾವ್ ಅವರ ಪತ್ನಿ ಡಾ. ಪ್ರತಿಮಾ ರಾವ್, ಪುತ್ರ ರಾಹುಲ್, ಹಿರಿಯ ನರರೋಗ ತಜ್ಞ ಡಾ. ಐ. ಜಿ. ಭಟ್, ಎಂಐಒ ಸಂಸ್ಥೆಯ ನಿರ್ದೇಶಕ ಡಾ. ಸನತ್ ಹೆಗ್ಡೆ, ಡಾ. ರೋಹನ್ ಗಟ್ಟಿ, ಡಾ. ಜಲಾಲುದ್ದೀನ್ ಅಕ್ಬರ್, ಡಾ. ಕೃಷ್ಣ ಪ್ರಸಾದ್ ಸೇರಿದಂತೆ ವೈದ್ಯಕೀಯ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.