ಸುಳ್ಯ, ನ.13 (DaijiworldNews/TA): ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸರ್ವೆ ನಂಬರ್ 186ರ ಜಂಟಿ ಸರ್ವೆ ನಡೆಸಿ, ಸರ್ಕಾರಿ ಹಾಗೂ ಅರಣ್ಯ ಇಲಾಖೆಗೆ ಸೇರಿದ ಜಾಗಗಳ ಗಡಿ ಗುರುತಿಸುವಂತೆ ಆಗ್ರಹಿಸಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.


ನೆಲ್ಯಾಡಿ ಗ್ರಾಮದ ಸರ್ವೆ ನಂಬರ್ 186ರ ಜಂಟಿ ಸರ್ವೆ ಇದುವರೆಗೂ ನಡೆದಿಲ್ಲ. ಇದರಿಂದ ಈ ಸರ್ವೆ ನಂಬರ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ನಿವೇಶನ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನ ಹಾಗೂ ಸರ್ಕಾರಿ ಸವಲತ್ತುಗಳನ್ನು ಪಡೆದುಕೊಳ್ಳಲು ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಆದ್ದರಿಂದ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ, ಸರ್ವೆ ನಂಬರ್ 186ರ ಜಂಟಿ ಸರ್ವೆಯನ್ನು ತುರ್ತಾಗಿ ನಡೆಸಬೇಕು.
ಸರ್ಕಾರಿ ಹಾಗೂ ಅರಣ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಜಾಗಗಳ ಗಡಿಗಳನ್ನು ಸ್ಪಷ್ಟವಾಗಿ ಗುರುತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಶಾಸಕಿ ಮನವಿ ಮಾಡಿದ್ದಾರೆ. ಈ ಮೂಲಕ ನೆಲ್ಯಾಡಿ ಭಾಗದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರ ಕಲ್ಪಿಸಿ, ಜಂಟಿ ಸರ್ವೆಯ ಬೇಡಿಕೆಯನ್ನು ಈಡೇರಿಸುವಂತೆ ಅವರು ಕಂದಾಯ ಸಚಿವರನ್ನು ಒತ್ತಾಯಿಸಿದ್ದಾರೆ.