ಬಂಟ್ವಾಳ, ನ.13 (DaijiworldNews/TA): ಜನರಲ್ಲಿ ಕಾನೂನು ಸಾಕ್ಷರತೆ ಮೂಡಿಸುವುದು, ಉಚಿತ ಕಾನೂನು ನೆರವು ನೀಡುವುದು ಹಾಗೂ ಲೋಕ್ ಅದಾಲತ್ ಮೂಲಕ ಪ್ರಕರಣಗಳನ್ನು ಶೀಘ್ರವಾಗಿ ಮತ್ತು ಕಡಿಮೆ ಖರ್ಚಿನಲ್ಲಿ ಇತ್ಯರ್ಥಪಡಿಸುವುದೇ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ ಎಂದು ಬಂಟ್ವಾಳ ಪ್ರಧಾನ ಸಿವಿಲ್ ನ್ಯಾಯಾಧೀಶ ರಾಜೇಂದ್ರ ಪ್ರಸಾದ್ ಕೆ.ಎಸ್. ಹೇಳಿದ್ದಾರೆ.

ಶುಕ್ರವಾರ ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲೂಕು ಪಂಚಾಯತ್ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 'ರಾಷ್ಟ್ರೀಯ ಕಾನೂನು ಸೇವೆಗಳ ದಿನ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ.ಪಿ. ಮಾತನಾಡಿ, ಜನತಾ ನ್ಯಾಯಾಲಯದಲ್ಲಿ (ಲೋಕ್ ಅದಾಲತ್) ಯಾವುದೇ ಕೋರ್ಟ್ ಶುಲ್ಕವಿಲ್ಲದೆ, ರಾಜೀ ಸಂಧಾನದ ಮೂಲಕ ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬಹುದು ಎಂದರು.
ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಸುಚಿತ್ರಾ ಕೆ. ಅವರು ಉಚಿತ ಕಾನೂನು ನೆರವು ಪಡೆಯುವ ವಿಧಾನಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ದಯಾನಂದ ರೈ ಪಿ., ಸಹಾಯಕ ಸರ್ಕಾರಿ ಅಭಿಯೋಜಕಿ ಹರಿಣಿ ಕುಮಾರಿ ಡಿ., ತಾಪಂ ಇಒ ಸಚಿನ್ ಕುಮಾರ್, ನಗರ ಠಾಣಾ ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕ ವಿಜಯ್ ಶಂಕರ್ ಆಳ್ವ, ವಿಶ್ವನಾಥ್ ಬಿ. ಉಪಸ್ಥಿತರಿದ್ದರು.