ಕಡಬ, ನ.14 (DaijiworldNews/TA): ಹಣ್ಣು ಸಾಗಿಸುತ್ತಿದ್ದ ಪಿಕಪ್ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಅಲಂಕಾರ್ ಸಮೀಪದ ನೆಕ್ರೆ ಬಳಿ ನವೆಂಬರ್ 14ರಂದು ನಡೆದಿದೆ.


ಮಂಗಳೂರಿನಿಂದ ಕಡಬದ ಕಲಾರಕ್ಕೆ ಹಣ್ಣುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಪಿಕಪ್ ವಾಹನದಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದ್ದು, ಈ ವೇಳೆ ಓರ್ವ ಗಾಯಾಳು ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಹಾಗೂ ಗಾಯಗೊಂಡವರ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.