ಸುಳ್ಯ, ನ.16 (DaijiworldNews/TA): ತಾಲೂಕಿನ ಜಾಲ್ಸೂರು ಗ್ರಾಮದ ಕೆಮ್ಮನಬಳ್ಳಿಯಲ್ಲಿ ಒಂಟಿ ಸಲಗವೊಂದು ಕೃಷಿ ತೋಟಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದೆ. ಕೆಮ್ಮನಬಳ್ಳಿಯ ದಿವಾಕರ ಎಂಬವರಿಗೆ ಸೇರಿದ ಕೃಷಿ ತೋಟಕ್ಕೆ ನುಗ್ಗಿದ ಒಂಟಿ ಆನೆ, ತೋಟದಲ್ಲಿದ್ದ ತೆಂಗು, ಬಾಳೆ ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿದೆ ಎಂದು ತಿಳಿದುಬಂದಿದೆ.

ಆನೆಯ ದಾಳಿಯಿಂದ ಕೃಷಿ ಬೆಳೆಗಳಿಗೆ ಹಾನಿಯಾಗಿದ್ದು, ಕೃಷಿಕರಿಗೆ ಆರ್ಥಿಕ ನಷ್ಟ ಉಂಟಾಗಿದೆ. ಜಾಲ್ಸೂರು ಗ್ರಾಮದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ ಮುಂದುವರಿದಿರುವುದು ಸ್ಥಳೀಯ ಕೃಷಿಕರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಕಷ್ಟಪಟ್ಟು ಬೆಳೆಸಿದ ಕೃಷಿ ಬೆಳೆಗಳು ಕಾಡಾನೆಗಳ ದಾಳಿಗೆ ತುತ್ತಾಗುತ್ತಿರುವುದರಿಂದ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಡಾನೆಗಳ ಹಾವಳಿ ನಿಯಂತ್ರಿಸಲು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.