ಉಳ್ಳಾಲ, ನ.16 (DaijiworldNews/TA): ಕಟ್ಟಡ ನಿರ್ಮಾಣ ಕಾರ್ಮಿಕರ ಸಾಮಾಜಿಕ ಭದ್ರತೆ ಖಚಿತಪಡಿಸಬೇಕು, ಕಾರ್ಮಿಕ ವಿರೋಧಿ ಲೇಬರ್ ಕೋಡ್ಗಳನ್ನು ರದ್ದುಗೊಳಿಸಬೇಕು ಹಾಗೂ ನೇರ ಫಲಾನುಭವಿ ವರ್ಗಾವಣೆ ಆಧಾರಿತ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಉಳ್ಳಾಲದಲ್ಲಿ ಪ್ರತಿಭಟನೆ ನಡೆಯಿತು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಶನ್ನ ದೇಶವ್ಯಾಪಿ ಪ್ರತಿಭಟನೆಯ ಭಾಗವಾಗಿ, ಫೆಡರೇಶನ್ನ ಉಳ್ಳಾಲ ತಾಲೂಕು ಸಮಿತಿ ಹಾಗೂ ಸಿಐಟಿಯು ವತಿಯಿಂದ ಸೋಮವಾರ ಬೆಳಿಗ್ಗೆ ನಾಟೆಕಲ್ನಲ್ಲಿರುವ ಉಳ್ಳಾಲ ತಾಲೂಕು ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಕಾರ್ಮಿಕರು ದೀರ್ಘಕಾಲ ಹೋರಾಟ ನಡೆಸಿ ಪಡೆದುಕೊಂಡಿದ್ದ 29 ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವ ಮೂಲಕ ಕೋಟ್ಯಂತರ ದುಡಿಯುವ ವರ್ಗದ ಬದುಕಿಗೆ ಕೊಳ್ಳಿ ಇಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕರ ಹಕ್ಕುಗಳು ಮತ್ತು ಸಾಮಾಜಿಕ ಭದ್ರತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಫೆಡರೇಶನ್ನ ಉಳ್ಳಾಲ ತಾಲೂಕು ಅಧ್ಯಕ್ಷ ಜನಾರ್ಧನ ಕುತ್ತಾರು ಸೇರಿದಂತೆ ಹಲವಾರು ಕಾರ್ಮಿಕರು ಹಾಗೂ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.