ಉಡುಪಿ, ನ.16 (DaijiworldNews/TA): ಕೇಂದ್ರ ಸಚಿವರು ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು (ನ.16) ಕುಟುಂಬ ಸಮೇತರಾಗಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.

ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಅವರು, ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕುಟುಂಬದ ಒಳಿತು, ಆರೋಗ್ಯ ಮತ್ತು ಲೋಕಕಲ್ಯಾಣಕ್ಕಾಗಿ ದೇವಸ್ಥಾನದ ಆವರಣದಲ್ಲಿ ಶಾಸ್ತ್ರೋಕ್ತವಾಗಿ 'ನವಚಂಡಿ ಹೋಮ' ನೆರವೇರಿಸಿ, ಪೂರ್ಣಾಹುತಿಯಲ್ಲಿ ಪಾಲ್ಗೊಂಡರು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಸದಸ್ಯರು ಹಾಗೂ ಸ್ಥಳೀಯ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರ ವತಿಯಿಂದ ಕೇಂದ್ರ ಸಚಿವರನ್ನು ಸಾಂಪ್ರದಾಯಿಕವಾಗಿ ಬರಮಾಡಿಕೊಂಡು, ದೇವಿಯ ಪ್ರಸಾದ ನೀಡಿ ಗೌರವಿಸಲಾಯಿತು.