ಉಡುಪಿ, ಮೇ.15 (DaijiworldNews/PY): ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಉಂಟಾಗಿರುವ ತೌಕ್ತೆ ಚಂಡಮಾರುತದ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ಮುಂಜಾನೆ 3 ಗಂಟೆಯಿಂದ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.




ಚಂಡಮಾರುತದ ಪರಿಣಾಮ ಮಲ್ಪೆ, ಪಡುಕೆರೆ, ಮರವಂತೆ ಹಾಗೂ ಮಟ್ಟು ಭಾಗದಲ್ಲಿ ಕಡಲು ತೀವ್ರಗೊಂಡಿದೆ. ಕೆಲವೆಡೆ ಕಡಲ್ಕೊರೆತ ಹಾಗೂ ತೀವ್ರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 3 ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ 18ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಇಂದು ಹಾಗೂ ನಾಳೆ ಉಡುಪಿಯಲ್ಲಿ ರೆಡ್ ಅಲರ್ಟ್ ಜಾರಿ ಮಾಡಲಾಗಿದೆ.
ಚಂಡಮಾರುತದ ಪರಿಣಾಮ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ.
ಪ್ರಾಕೃತಿಕ ವಿಕೋಪ ಸೇರಿದಂತೆ ಯಾವುದೇ ಸಮಸ್ಯೆಗಳ ತುರ್ತುಸೇವೆಗೆ ಹೆಲ್ಪ್ಲೈನ್ ನಂ 1077 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.