ಬೆಂಗಳೂರು, ಆ,16 (DaijiworldNews/AK): ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮಘಟ್ಟದ ಹಲವೆಡೆ, ಭೂಕುಸಿತ, ಗುಡ್ಡ ಕುಸಿತ ಸಂಭವಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಚಿವರು ಕೊಡಗಿನ ಭೂಕುಸಿತ ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದ್ದು, ಪಶ್ಚಿಮಘಟ್ಟದಲ್ಲಿ ಸಂಭಾವ್ಯ ಅವಗಢ ತಡೆಯಲು ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದ ಒತ್ತುವರಿ ತೆರವಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ.