ಬೆಂಗಳೂರು, ಆ,16 (DaijiworldNews/AK) : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಅವರು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.
ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ತರಬೇತಿ ನಿರತ ವೈದ್ಯೆಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ನೈತಿಕ ಹೊಣೆ ಹೊತ್ತು ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು. ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ತಲೆ ತಗ್ಗಿಸುವಂತೆ ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ದಿನನಿತ್ಯ ಅಲ್ಲಿ ಮಹಿಳೆಯರ ಮೇಲೆ, ಯುವಕರ ಮೇಲೆ ಹಲ್ಲೆ, ಕೊಲೆ, ಸುಲಿಗೆ, ಗೂಂಡಾಗಿರಿ ನಡೆಯುತ್ತಿದ್ದರೂ ಅಲ್ಲಿನ ಸರ್ಕಾರ ಯಾರ ಮೇಲೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟೀಕಿಸಿದ್ದಾರೆ.ಆಗಸ್ಟ್ 9ರಂದು ತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಭೀಕರ ಕೊಲೆಯಾದರೂ ಸಹ ತನಿಖೆಯನ್ನು ಅಲ್ಲಿನ ಸರ್ಕಾರ ಮುಚ್ಚಿ ಹಾಕಲು ಪ್ರಯತ್ನ ಪಟ್ಟಿತು. ಆದರೆ ದೇಶದ್ಯಾಂತ ವೈದ್ಯರ, ವಿದ್ಯಾರ್ಥಿಗಳ ಪತಿಭಟನೆ ಹಾಗೂ ಹೈಕೋರ್ಟ್ ತೀರ್ಪಿನ ನಂತರ ಸಿಬಿಐ ಗೆ ವಹಿಸಿದೆ ಎಂದು ವಿವರಿಸಿದ್ದಾರೆ.
ಈ ಪ್ರಕರಣವನ್ನು ನಿಭಾಯಿಸುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಆದರೆ ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ. ಈಗ ವೈದ್ಯ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕೆಂದು ಪಾದಯಾತ್ರೆ ಮಾಡುತ್ತಿರುವುದು ನಾಚಿಕೆಗೇಡು. ಮತ್ತು ಐಎನ್ಡಿಐಎ ಒಕ್ಕೂಟವು ಈ ಪ್ರಕರಣದಲ್ಲಿ ಏಕೆ ಮೌನಕ್ಕೆ ಶರಣಾಗಿದೆ? ಎಂದು ಪ್ರಶ್ನಿಸಿದ್ದಾರೆ.
ಕೊಲ್ಕತ್ತಾದ ಆರ್. ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮೇಲೆ ದಾಳಿ ಮಾಡಿರುವುದು ಖಂಡನೀಯ. ಮತ್ತು ಈ ದಾಳಿ ತಡೆಗಟ್ಟಲು ಸರ್ಕಾರ ವಿಫಲವಾಗಿದೆ. ಅಲ್ಲಿನ ಸರ್ಕಾರ ಈ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಹಾಗೂ ಎಲ್ಲ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಸುರಕ್ಷತಾ ಕ್ರಮ ಅಳವಡಿಸಬೇಕು. ವೈದ್ಯರಿಗೆ, ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸುವುದಾಗಿ ಅವರು ತಿಳಿಸಿದ್ದಾರೆ.