ನವದೆಹಲಿ, ಮೇ 25 (Daijiworld News/MSP): ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲಿನ ನಂತರ ಈಗ ಆತ್ಮಾವಲೋಕನ ಸಭೆ ನವದೆಹಲಿಯಲ್ಲಿ ಪ್ರಾರಂಭವಾಗಿದೆ. ಈ ಹಿಂದೆ ನಿರೀಕ್ಷೆ ಮಾಡಿದಂತೆ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆಯ ಪ್ರಸ್ತಾಪ ಮಾಡಿದ್ದಾರೆ. ಆದರೆ ಇದಕ್ಕೆ ಯಾವುದೇ ನಾಯಕರು ಒಪ್ಪಿಗೆ ನೀಡಲಿಲ್ಲ ಎನ್ನಲಾಗಿದೆ.
ಲೋಕಸಭಾ ಚುನಾವಣೆಯ ಬಳಿಕ ಮೊದಲ ಬಾರಿಗೆ ಪಕ್ಷದ ಸಭೆ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾರ್ಗದರ್ಶಕರಾದ ಸೋನಿಯಾ ಗಾಂಧಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯುತ್ತಿದ್ದು, ದೇಶದ ಎಲ್ಲಾ ರಾಜ್ಯಗಳ ಕಾಂಗ್ರೆಸ್ ನಾಯಕರು ಕೂಡ ಸಭೆಗೆ ಹಾಜರಾಗಿದ್ದು, ಈ ಸಭೆಯ ಆರಂಭದಲ್ಲೇ ರಾಹುಲ್ ಈ ಬಗ್ಗೆ ಪ್ರಸ್ತಾಪ ಮಾಡಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಆದರೆ ಅದನ್ನು ನೇರವಾಗಿ ತಿರಸ್ಕರಿಸಿದ ನಾಯಕರು, ಈ ಸ್ಥಿತಿಯಲ್ಲಿ ರಾಜೀನಾಮೆ ನೀಡಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಕಾರ್ಯಕರ್ತರು ಇನ್ನಷ್ಟು ಹತಾಶರಾಗುತ್ತಾರೆ. ಪಕ್ಷ ಬಲಿಷ್ಟಗೊಳಿಸುವ ಬಗ್ಗೆ ಯೋಚಿಸುವ ಎಂದಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರೇ ಅಮೇಥಿ ಕ್ಷೇತ್ರದಲ್ಲಿ ಸೋಲುಂಡು ಮುಖಭಂಗ ಅನುಭವಿಸಿದ್ದರು. ಈಗಾಗಲೇ ಕಾಂಗ್ರೆಸ್ ಸೋಲಿಗೆ ಹೊಣೆ ಹೊತ್ತು 3 ರಾಜ್ಯಾಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗಿತ್ತು.