ಬೆಂಗಳೂರು, ಸೆ.11(DaijiworldNews/AA): ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನ ಅರಣ್ಯ ಭವನದಲ್ಲಿಂದು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ನಂತರ ಮಾತನಾಡಿದ ಅವರು, ಕಾಡ್ಗಿಚ್ಚು ನಂದಿಸುವಾಗ, ಮಾನವ-ವನ್ಯಜೀವಿ ಸಂಘರ್ಷ ತಡೆಯುವ ಸಂದರ್ಭದಲ್ಲಿ ಮತ್ತು ಒತ್ತುವರಿದಾರರು ಮತ್ತು ಕಾಡುಗಳ್ಳರ ಆಕ್ರೋಶಕ್ಕೆ ಗುರಿಯಾಗಿ ಈವರೆಗೆ 61 ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಎಲ್ಲರ ಕುಟುಂಬದೊಂದಿಗೆ ಅರಣ್ಯ ಇಲಾಖೆ ನಿಂತಿದೆ ಎಂದರು.
ಕಳೆದ 16 ತಿಂಗಳ ಅವಧಿಯಲ್ಲಿ ಅರಣ್ಯ ಇಲಾಖೆ ಸುಮಾರು 10 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಜೊತೆಗೆ ಬೆಂಗಳೂರು, ಕೋಲಾರ, ಬೀದರ್ ಸೇರಿದಂತೆ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ ಬೆಲೆ ಬಾಳುವ 2,500 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆಯಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಪಶ್ಚಿಮಘಟ್ಟ ಹಲವು ನದಿಗಳ ಮೂಲವಷ್ಟೇ ಅಲ್ಲದೆ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ನೆಲೆಯಾಗಿದೆ. ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು.