ಮೈಸೂರು,ಮೇ29(Daijiworld News/AZM):ಸೋಮವಾರ(ಜೂ.03)ದಂದು ಕೆ.ಆರ್.ಎಸ್ ಅಣೆಕಟ್ಟೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪು ವಿರೋಧಿಸಿ ಮುತ್ತಿಗೆ ಹಾಕಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಒಳಹರಿವು ಹೆಚ್ಚಿದರೆ ತಮಿಳುನಾಡಿಗೆ 9.19 ಟಿಎಂಸಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು,ಒಳಹರಿವು ಹೆಚ್ಚಾದರೂ ತಮಿಳುನಾಡಿಗೆ ನೀರು ಬಿಡಬಾರದು. ನಮ್ಮ ಜನ ನೀರಿಲ್ಲದೇ ಸಂಕಷ್ಟದಲ್ಲಿ ಇದ್ದಾರೆ. ಹೀಗಿರುವಾಗ ಪ್ರಾಧಿಕಾರದ ತೀರ್ಪು ವೈಜ್ಞಾನಿಕ ಅಲ್ಲ. ತೀರ್ಪಿನ ಬಗ್ಗೆ ಪ್ರಾಧಿಕಾರ ಪುನರ್ ಪರಿಶೀಲಿಸಬೇಕು ಎಂದರು. ಒಂದು ವೇಳೆ ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕ ಬಂದ್ ಗೆ ಕರೆ ಕೊಡ್ತೀವಿ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.