ದೆಹಲಿ, ಸೆ.24(DaijiworldNews/AA): ಮುಡಾ ಪ್ರಕರಣದ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.
ಪ್ರಕರಣದ ವಿಚಾರಣೆ ಕುರಿತು ರಾಜ್ಯಪಾಲರ ನಿರ್ಣಯ ಎತ್ತಿಹಿಡಿದ ಹೈಕೋರ್ಟ್ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಪ್ರಕರಣ ದೇಶದ್ಯಾಂತ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಡಿಎನ್ಎಯಲ್ಲಿ ಭ್ರಷ್ಟಾಚಾರ ಇದೆ ಎಂದು ಹಿಂದೆಯೇ ಹೇಳಿದ್ದೆ. ಅದಕ್ಕೆ ಪೂರಕವಾದ ಆದೇಶವನ್ನು ಹೈಕೋರ್ಟ್ ನೀಡಿದೆ. ಮೇಲ್ನೋಟಕ್ಕೆ ಮುಖ್ಯಮಂತ್ರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದರು.
ಬಿಜೆಪಿ ಎಂದಿಗೂ ಸರ್ಕಾರ ಉರುಳಿಸುವ ಪ್ರಯತ್ನ ಮಾಡಿಲ್ಲ. ಆದರೆ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯಲಿದೆ. ರಾಜ್ಯಪಾಲರ ವಿರುದ್ಧ ಸುಳ್ಳು ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆಯೇ ಎಂದು ಪ್ರಶ್ನೆ ಮಾಡಿದರು.
ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹೈಕೋರ್ಟ್ ಆದೇಶದಲ್ಲಿ ಸಿಎಂ ನಿಯಮಗಳನ್ನು ಗಾಳಿಗೆ ತೂರಿ, ಅಕ್ರಮ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೈಕೋರ್ಟ್ ಹೇಳಿದೆ. ಸಾಮಾನ್ಯ ವ್ಯಕ್ತಿಗೆ ಈ ಪ್ರಮಾಣದಲ್ಲಿ ಪರಿಣಾಮ ನೀಡಲು ಸಾಧ್ಯವಿಲ್ಲ. ಹೈಕೋರ್ಟ್ ಆದೇಶದ ಹಿನ್ನಲೆ ಸಿಎಂ ಸ್ಥಾನಕ್ಕೆ ತಡ ಮಾಡದೇ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ತಿಳಿಸಿದರು.