ಹುಬ್ಬಳ್ಳಿ, ಸೆ.28(DaijiworldNews/AA): ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವೇ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರ ಆಹಾರ, ನಾಗರಿಕ ಪೂರೈಕೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನಿಶ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅವರನ್ನು ಬಂಧಿಸುವುದು ಅಥವಾ ಬಿಡುವುದು ತನಿಖಾ ಸಂಸ್ಥೆಗಳಿಗೆ ಬಿಟ್ಟ ವಿಚಾರ ಎಂದರು.
ಈ ಹಿಂದೆ ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಆರೋಪ ಕೇಳಿ ಬಂದಾಗ ರಾಜೀನಾಮೆಗೆ ಒತ್ತಾಯ ಮಾಡಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಈಗ ಮುಡಾ ಹಗರಣದ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಹೈಕಮಾಂಡ್ ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದಾರಾಮಯ್ಯ ಅವರ ರಾಜೀನಾಮೆ ಪಡೆಯಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಈ ರೀತಿಯ ಪರಿಸ್ಥಿತಿ ಎದುರಾಗಿರುವುದು ನೈತಿಕ ದಿವಾಳಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಮುಂದುವರೆದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಿಸಿಸುವಂತೆ ಕೋರ್ಟ್ ಆದೇಶಿಸಿರುವ ಬಗ್ಗೆ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್ ವಿರುದ್ಧ ರಾಜಕೀಯ ಪ್ರೇರಿತವಾಗಿ ದೂರು ದಾಖಲು ಮಾಡಲಾಗಿದೆ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಎಂದು ಪ್ರತಿಕ್ರಿಯೆ ನೀಡಿದರು.